ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಆರೋಪಿಯ ಬಂಧನ
ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಆರೋಪದಡಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವನಗರದ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿ.ಐ.ಟಿ.-ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ ಪಶ್ಚಿಮ ವಲಯ ಮಂಗಳೂರು ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಜೂನ್ 12ರಂದು ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಜಗದೀಶ ಪೂಜಾರಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳು ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳು ದಾಖಲಾಗಿವೆ. ಮ್ಸಾದ್ಗಕ್ ವಸ್ತು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ ಎರಡು ಪ್ರಕರಣಗಳು ತನಿಖೆಯ ಹಂತದಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಆರೋಪಿಗೆ ಈಗಾಗಲೇ ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪುನರಾವರ್ತಿತ ಅಪರಾಧ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಆರೋಪಿಯನ್ನು ಪಿ.ಐ.ಟಿ.-ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದ್ದು, ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.