ಡಾ. ಶ್ಯಾಮಪ್ರಸಾದ್ ಮುಖರ್ಜಿ ತ್ಯಾಗ, ರಾಷ್ಟ್ರಭಕ್ತಿ ಕಾರ್ಯಕರ್ತರಿಗೆ ಪ್ರೇರಣೆ: ದಿನಕರ ಶೆಟ್ಟಿ ಹೆರ್ಗ
ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ದೇಶದ ಅಖಂಡತೆ ಮತ್ತು ಏಕತೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನಗೈದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕವಾಗಿವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಿದ್ದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಲ್ಕತ್ತಾ ವಿಶ್ವವಿದ್ಯಾಲಯದ ಅತ್ಯಂತ ಕಿರಿಯ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಡಾ. ಮುಖರ್ಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದು, ಭಾರತದ ಮೊದಲ ಕೈಗಾರಿಕಾ ಮತ್ತು ಸರಬರಾಜು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ತುಷ್ಟೀಕರಣದ ನೀತಿಗಳನ್ನು ವಿರೋಧಿಸಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾರ್ಗದರ್ಶನದಲ್ಲಿ ಭಾರತೀಯ ಜನಸಂಘವನ್ನು ಸ್ಥಾಪಿಸಿ ರಾಷ್ಟ್ರವಾದಿ ಚಿಂತನೆಗೆ ಹೊಸ ದಿಕ್ಕು ನೀಡಿದರು ಎಂದು ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ 370ನೇ ವಿಧಿಯನ್ನು ಬಲವಾಗಿ ವಿರೋಧಿಸಿದ್ದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರು “ಒಂದು ದೇಶದಲ್ಲಿ ಎರಡು ಪ್ರಧಾನಿ, ಎರಡು ಸಂವಿಧಾನ ಮತ್ತು ಎರಡು ಧ್ವಜ ಇರಬಾರದು” ಎಂಬ ಧ್ಯೇಯದೊಂದಿಗೆ ಹೋರಾಟ ನಡೆಸಿದ್ದರು. 1953ರಲ್ಲಿ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಿದ ವೇಳೆ ಬಂಧನಕ್ಕೊಳಗಾಗಿ ಜೈಲುವಾಸದಲ್ಲಿರುವಾಗಲೇ ಅನುಮಾನಾಸ್ಪದವಾಗಿ ನಿಧನರಾದ ಅವರ ತ್ಯಾಗ, ರಾಷ್ಟ್ರಭಕ್ತಿ ಮತ್ತು ದೂರದೃಷ್ಟಿಯ ಚಿಂತನೆಗಳು ಇಂದಿಗೂ ಯುವಜನತೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ದಾರಿದೀಪವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಹಾಗೂ ವಿವಿಧ ಸ್ತರಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
