ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 'ತಾಯಿಯ ಹೆಸರಿನಲ್ಲಿ ಒಂದು ಗಿಡ' ಅಭಿಯಾನ
Friday, June 05, 2026
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕುಂದಾಪುರ ತಾಲೂಕಿನ ಅಮಾಸೆಬೈಲಿನ ಸರ್ಕಾರಿ ಪ್ರೌಢಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಕರ್ನಾಟಕ ಅರಣ್ಯ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಆಯೋಜಿಸಲಾದ 'ತಾಯಿಯ ಹೆಸರಿನಲ್ಲಿ ಒಂದು ಗಿಡ' ಅಭಿಯಾನಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಚಾಲನೆ ನೀಡಿದರು. ವಿದ್ಯಾರ್ಥಿಗಳೊಂದಿಗೆ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವ ಸಾರಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಅದರ ಆರೈಕೆ ಮಾಡಬೇಕು ಎಂದು ಕರೆ ನೀಡಿದರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದ್ದು, ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸುವ ಮೂಲಕ ಹಸಿರು ಕರ್ನಾಟಕದ ಕನಸನ್ನು ನನಸಾಗಿಸಬಹುದು ಎಂದು ಶಾಸಕರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಆಗುಂಬೆ ವನ್ಯಜೀವಿ ವಲಯ ಅಮಾಸೆಬೈಲಿನ ಅರಣ್ಯ ಅಧಿಕಾರಿ ರೂಪೇಶ್, ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್, ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಕುಮಾರ್ ಭಾಗವತ್, ಶಾಲೆಯ ಶಿಕ್ಷಕ ವೃಂದ, ಅರಣ್ಯ ಇಲಾಖೆಯ ಸಿಬ್ಬಂದಿ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.
.jpeg)
