ಉಡುಪಿ ಕೋರ್ಟ್ ಗೆ ಬಾಂಬ್ ಬೆದರಿಕೆ:ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಖಂಡನೆ
Monday, June 22, 2026
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆಗೆ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನ್ಯಾಯಾಲಯವು ನ್ಯಾಯದ ದೇವಾಲಯವಾಗಿದ್ದು, ಇಂತಹ ಬೆದರಿಕೆಗಳು ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಯದ ವಾತಾವರಣ ಸೃಷ್ಟಿಸುವ ದುರುದ್ದೇಶದ ಕೃತ್ಯಗಳಾಗಿವೆ. ಇಂತಹ ಘಟನೆಗಳು ನ್ಯಾಯಾಂಗದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಪ್ರಯತ್ನಗಳಾಗಿದ್ದು, ಪ್ರಕರಣವನ್ನು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಬೆದರಿಕೆಯ ಹಿಂದಿರುವ ವ್ಯಕ್ತಿಗಳು ಅಥವಾ ಸಂಘಟನೆಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜೊತೆಗೆ, ನ್ಯಾಯಾಲಯದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.