ಹೆಬ್ರಿ ಕೊರಗ ಕಾಲೋನಿಯ ಮಲ್ಟಿ ಪರ್ಪಸ್ ಸೆಂಟರ್‌ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ
Monday, June 08, 2026
ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ದೇವಸ್ಥಾನಬೆಟ್ಟು ಕೊರಗ ಕಾಲೋನಿಯಲ್ಲಿ ನಿರ್ಮಿಸಲಾಗಿರುವ ಮಲ್ಟಿ ಪರ್ಪಸ್ ಸೆಂಟರ್‌ಗೆ ಸೋಮವಾರ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ಈ ವೇಳೆ ಕೇಂದ್ರದ ಸೌಲಭ್ಯಗಳು, ಮೂಲಸೌಕರ್ಯಗಳು ಹಾಗೂ ಸ್ಥಳೀಯ ನಿವಾಸಿಗಳಿಗೆ ಇದರಿಂದ ದೊರೆಯಲಿರುವ ಪ್ರಯೋಜನಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಿದರು. ಮಲ್ಟಿ ಪರ್ಪಸ್ ಸೆಂಟರ್ ಸಮುದಾಯದ ಅಭಿವೃದ್ಧಿಗೆ ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬಳಿಕ ‘ತಾಯಿಗಾಗಿ ಒಂದು ಗಿಡ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದರು ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ವಹಿಸಬೇಕು ಎಂದು ಕರೆ ನೀಡಿದರು.
ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

