ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮನವಿ
ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ತುಳು ಅಭಿವೃದ್ಧಿ ನಿಗಮ (ಪ್ರಾಧಿಕಾರ) ಸ್ಥಾಪಿಸಬೇಕು . ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸಬೇಕು ಎಂದು ಕಾರ್ಕಳದ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಉದಯ್ ಶೆಟ್ಟಿ ಮುನಿಯಾಲ್ ಅವರು, ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃಭಾಷೆಯಾಗಿದೆ. ತುಳು ಭಾಷೆ ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜೀವನಶೈಲಿಯ ಅವಿಭಾಜ್ಯ ಅಂಗವಾಗಿದ್ದು, ಜಾಗತೀಕರಣದ ಪರಿಣಾಮದಿಂದ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಇಂದಿನ ಸಂದರ್ಭದಲ್ಲಿ ಇದರ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ವಿಶೇಷ ಕ್ರಮಗಳ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ತುಳು ಅಭಿವೃದ್ಧಿ ಪ್ರಾಧಿಕಾರವನ್ನು ಶೀಘ್ರದಲ್ಲಿ ಸ್ಥಾಪಿಸಿ, ತುಳು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ, ತುಳು ಸಾಹಿತ್ಯ, ಸಂಶೋಧನೆ ಹಾಗೂ ಪ್ರಕಟಣೆಗಳಿಗೆ ಉತ್ತೇಜನ ನೀಡಬೇಕು. ಅಲ್ಲದೆ ಶಾಲೆ ಹಾಗೂ ಕಾಲೇಜುಗಳಲ್ಲಿ ತುಳು ಅಧ್ಯಯನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಜೊತೆಗೆ ಯಕ್ಷಗಾನ, ಭೂತಾರಾಧನೆ, ನಾಗಾರಾಧನೆ ಸೇರಿದಂತೆ ತುಳುನಾಡಿನ ಸಾಂಸ್ಕೃತಿಕ ಪರಂಪರೆಗಳ ಉಳಿವಿಗೆ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದಲ್ಲದೆ ತುಳು ಭಾಷೆಗೆ ಸಂವಿಧಾನಿಕ ಮತ್ತು ಶೈಕ್ಷಣಿಕ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ತುಳುನಾಡಿನ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ವಿಶೇಷ ನೆರವು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಒತ್ತಾಯ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಅನುಕೂಲವಾಗುವಂತೆ ಸುಸಜ್ಜಿತ ತುಳು ಭವನ ನಿರ್ಮಾಣ ಮಾಡುವಂತೆ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಕಾರ್ಕಳವು ತುಳುನಾಡಿನ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಇಲ್ಲಿ ತುಳು ಭಾಷೆ, ಯಕ್ಷಗಾನ, ಭೂತಾರಾಧನೆ ಹಾಗೂ ಇತರ ಜನಪದ ಕಲೆಗಳು ಇಂದಿಗೂ ಜೀವಂತವಾಗಿವೆ. ಈ ಹಿನ್ನೆಲೆಯಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಅಧ್ಯಯನ, ಸಂಶೋಧನೆ ಹಾಗೂ ಪ್ರಚಾರಕ್ಕಾಗಿ ತುಳು ಭವನ ನಿರ್ಮಾಣ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತಾವಿತ ತುಳು ಭವನದಲ್ಲಿ ಗ್ರಂಥಾಲಯ, ಸಂಶೋಧನಾ ಕೇಂದ್ರ, ಸಭಾಂಗಣ, ವಸ್ತುಸಂಗ್ರಹಾಲಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಬಹುದಾಗಿದೆ. ಇದರಿಂದ ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಹೀಗಾಗಿ, ಕಾರ್ಕಳದಲ್ಲಿ ಸರ್ಕಾರದ ವತಿಯಿಂದ ಸೂಕ್ತ ಜಾಗ ಗುರುತಿಸಿ, ಅಗತ್ಯ ಅನುದಾನ ಮಂಜೂರು ಮಾಡಿ ಶೀಘ್ರದಲ್ಲೇ ತುಳು ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿರುವುದಾಗಿ ಉದಯ್ ಶೆಟ್ಟಿ ಮುನಿಯಾಲ್ ತಿಳಿಸಿದ್ದಾರೆ.
