ಎಸ್ಐಟಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
Tuesday, June 16, 2026
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಕಾರು ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಹಾಗೂ ಚಾಲಕ ಸೇರಿ ನಾಲ್ವರು ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಸಲ್ಲಿಸಿರುವ ಹೈಕೋರ್ಟ್ ರಿಟ್ ಅರ್ಜಿಯ ಕುರಿತು ಚರ್ಚಿಸಲು, ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ್ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ಅವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಚಾರ್ಮಾಡಿ ಘಾಟ್‌ನಲ್ಲಿ ಕಾರು ಏಕಾಏಕಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಘಟನೆಯ ಬಳಿಕ ಅಧಿಕಾರಿಗಳು ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
