-->
ಪುತ್ತೂರು–ಉಪ್ಪಿನಂಗಡಿ ರಸ್ತೆ ಇಂದಿನಿಂದ ಒಂದು ತಿಂಗಳ ಕಾಲ ಬಂದ್: ಬದಲಿ ಮಾರ್ಗ ವ್ಯವಸ್ಥೆ

ಪುತ್ತೂರು–ಉಪ್ಪಿನಂಗಡಿ ರಸ್ತೆ ಇಂದಿನಿಂದ ಒಂದು ತಿಂಗಳ ಕಾಲ ಬಂದ್: ಬದಲಿ ಮಾರ್ಗ ವ್ಯವಸ್ಥೆ


ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು–ಉಪ್ಪಿನಂಗಡಿ ರಸ್ತೆಯ ಬೊಳುವಾರಿನಿಂದ ಸೇಡಿಯಾಪುವರೆಗೆ ನಡೆಯುತ್ತಿರುವ ಚತುಷ್ಪಥ ಕಾಂಕ್ರೀಟಿಕರಣ ಕಾಮಗಾರಿಯ ಭಾಗವಾಗಿ ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ 18ರಿಂದ ಜುಲೈ 18ರವರೆಗೆ ಒಂದು ತಿಂಗಳ ಕಾಲ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಭಾಗದಲ್ಲಿ ರಸ್ತೆ ಕಿರಿದಾಗಿದ್ದು, ದ್ವಿಮುಖ ವಾಹನ ಸಂಚಾರ ಅಸಾಧ್ಯವಾಗಿರುವುದರಿಂದ ಕಾಮಗಾರಿಯನ್ನು ಸುರಕ್ಷಿತವಾಗಿ ಮತ್ತು ಶೀಘ್ರವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಆದೇಶ ಹೊರಡಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಪುತ್ತೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಮನವಿಯ ಮೇರೆಗೆ ಸಾರ್ವಜನಿಕ ಹಿತಾಸಕ್ತಿ ಹಾಗೂ ವಾಹನ ಸಂಚಾರದ ಸುರಕ್ಷತೆಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಬದಲಿ ಮಾರ್ಗಗಳು: ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ:

ಪುತ್ತೂರು ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆ ಮೂಲಕ ಕೋಟಿಚ್ಚಾ ಹಾಲ್ ಮುಖಾಂತರ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸುವಂತೆ ವಾಹನಗಳಿಗೆ ಸೂಚಿಸಲಾಗಿದೆ.

ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ:

ಕೋಟೆಚ್ಚಾ ಹಾಲ್ ಮೂಲಕ ಎಪಿಎಂಸಿ ರಸ್ತೆಯಾಗಿ ಪುತ್ತೂರು ಮುಖ್ಯ ರಸ್ತೆಯನ್ನು ಸಂಪರ್ಕಿಸುವಂತೆ ವ್ಯವಸ್ಥೆ ಮಾಡಲಾಗಿದೆ.

ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ:

ಪಡೀಲ್ ಜಂಕ್ಷನ್ ಮೂಲಕ ನಗರ ಮಾರ್ಗದಲ್ಲಿ ಸಂಚರಿಸಲು ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತವು ವಾಹನ ಸವಾರರು ಹಾಗೂ ಸಾರ್ವಜನಿಕರು ಕಾಮಗಾರಿ ಅವಧಿಯಲ್ಲಿ ಸೂಚಿಸಲಾದ ಬದಲಿ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದ್ದು, ಸಂಚಾರ ನಿಯಮಗಳನ್ನು ಪಾಲಿಸಿ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಕೋರಿದೆ.

Ads on article

Advertise in articles 1

advertising articles 2

Advertise under the article