ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ: ಸಿಐಟಿಯು ಖಂಡನೆ
ಜಿಲ್ಲಾಡಳಿತ ಹಾಗೂ ಸಾರಿಗೆ ಪ್ರಾಧಿಕಾರದ ಅನುಮತಿ ಪಡೆಯದೆ ಉಡುಪಿ ಜಿಲ್ಲೆಯ ಖಾಸಗಿ ಬಸ್ ಮಾಲೀಕರು ಏಕಾಏಕಿ ಶೇಕಡಾ 5ರಿಂದ 8ರವರೆಗೆ ಬಸ್ ದರ ಹೆಚ್ಚಳ ಮಾಡಿರುವುದನ್ನು ಸಿಐಟಿಯು ಉಡುಪಿ ವಲಯ ಸಮಿತಿ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಿಐಟಿಯು ಉಡುಪಿ ವಲಯ ಸಮಿತಿ ಸಂಚಾಲಕ ಕವಿರಾಜ್ ಎಸ್. ಕಾಂಚನ್, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯನ್ನು ನೆಪವನ್ನಾಗಿ ಮಾಡಿಕೊಂಡು ಖಾಸಗಿ ಬಸ್ ಮಾಲೀಕರು ಜಿಲ್ಲಾಡಳಿತದ ಗಮನಕ್ಕೆ ತಾರದೆ ಹಾಗೂ ಸಾರಿಗೆ ಪ್ರಾಧಿಕಾರದ ಸಭೆ ನಡೆಸದೆ ಏಕಪಕ್ಷೀಯವಾಗಿ ಬಸ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ಜಿಲ್ಲಾಧಿಕಾರಿಗಳು ಸಾರಿಗೆ ಪ್ರಾಧಿಕಾರದ ಸಭೆ ಕರೆದು, ಬಸ್ ಮಾಲೀಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದ ಬಳಿಕವೇ ದರ ಪರಿಷ್ಕರಣೆ ಕುರಿತು ತೀರ್ಮಾನ ಕೈಗೊಳ್ಳಬೇಕು. ಆದರೆ ಈ ನಿಯಮಗಳನ್ನು ಪಾಲಿಸದೆ ಖಾಸಗಿ ಬಸ್ ಮಾಲೀಕರು ಸರ್ವಾಧಿಕಾರ ಧೋರಣೆಯಲ್ಲಿ ದರ ಏರಿಕೆ ಮಾಡಿರುವುದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿದ್ದರೆ, ಅದರ ವಿರುದ್ಧ ಬಸ್ ಮಾಲೀಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಅದನ್ನು ಬಿಟ್ಟು ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕುವುದು ನ್ಯಾಯಸಮ್ಮತವಲ್ಲ ಎಂದು ಸಿಐಟಿಯು ಅಭಿಪ್ರಾಯಪಟ್ಟಿದೆ.
ಈ ಹಿಂದೆ ಕೂಡ ಜಿಲ್ಲಾಡಳಿತದ ಅನುಮತಿ ಇಲ್ಲದೆ ಹಲವು ಬಾರಿ ಬಸ್ ದರ ಹೆಚ್ಚಳ ಮಾಡಲಾಗಿತ್ತು. ಸುರತ್ಕಲ್ ಟೋಲ್ ದರ ಹೆಚ್ಚಳದ ಸಂದರ್ಭದಲ್ಲಿ ಸಾರ್ವಜನಿಕರ ಹೋರಾಟದ ಫಲವಾಗಿ ಟೋಲ್ ತೆರವುಗೊಳಿಸಲಾಯಿತಾದರೂ, ಅದರ ಅನುಗುಣವಾಗಿ ಬಸ್ ದರ ಇಳಿಕೆ ಮಾಡಲಾಗಿಲ್ಲ. ಇದೀಗ ಮತ್ತೆ ದರ ಹೆಚ್ಚಳ ಮಾಡಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ಸಂಕಷ್ಟಕ್ಕೆ ತಳ್ಳಲಾಗಿದೆ ಎಂದು ಕವಿರಾಜ್ ಎಸ್. ಕಾಂಚನ್ ಆರೋಪಿಸಿದ್ದಾರೆ.
ಒಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಮತ್ತೊಂದೆಡೆ ಕಾರ್ಮಿಕರು ಮತ್ತು ದುಡಿಯುವ ವರ್ಗದ ವೇತನದಲ್ಲಿ ಯಾವುದೇ ಹೆಚ್ಚಳವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬಸ್ ದರ ಏರಿಕೆ ಸಾಮಾನ್ಯ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಬೀಳುವಂತೆ ಮಾಡಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ದರ ಏರಿಕೆಯನ್ನು ಹಿಂಪಡೆಯುವಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಗ್ರಾಮಗಳಿಗೆ ಸರ್ಕಾರಿ ಬಸ್ ಸೇವೆಯನ್ನು ವಿಸ್ತರಿಸಬೇಕು ಎಂದು ಸಿಐಟಿಯು ಒತ್ತಾಯಿಸಿದೆ.
ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಸಂಘಟಿಸಿಕೊಂಡು ತೀವ್ರ ಹೋರಾಟ ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸಿಐಟಿಯು ಎಚ್ಚರಿಕೆ ನೀಡಿದೆ.