ಬಿಜೆಪಿಗೆ ಸಿಂಗಂ ಅಣ್ಣಾಮಲೈ ಗುಡ್ ಬೈ...!
Tuesday, June 02, 2026
ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಆಕ್ರಮಣಕಾರಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ದಿಢೀರ್ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಕಳೆದ ಕೆಲವು ದಿನಗಳಿಂದ ಅಣ್ಣಾಮಲೈ ದೆಹಲಿಯಲ್ಲೇ ಬೀಡುಬಿಟ್ಟಿದ್ದರು. ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ತಮಿಳುನಾಡು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದರು. ತಾವು ಬೇರೆ ಪಕ್ಷ ಕಟ್ಟುವ ಬಗ್ಗೆ ಪ್ರಶ್ನೆ ಬಂದಾಗಲೂ ಅವರು ಸ್ಪಷ್ಟವಾಗಿ ಉತ್ತರಿಸಿರಲಿಲ್ಲ. ಕಾದು ನೋಡಿ ಎಂದಷ್ಟೇ ಹೇಳಿದ್ದರು. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಹೈಕಮಾಂಡ್ ನಾಯಕರು ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅಣ್ಣಾಮಲೈ ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದರು ಎನ್ನಲಾಗಿದೆ.