ದಲಿತರ ಪರ ಕೆಲಸ ಮಾಡದಿದ್ದರೆ ಸರ್ಕಾರಕ್ಕೆ ತಕ್ಕ ಉತ್ತರ: ಸುಂದರ ಮಾಸ್ತರ್ ಎಚ್ಚರಿಕೆ
ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜುಲೈ 3ರಂದು ಬೆಂಗಳೂರಿನಲ್ಲಿ ನಡೆಯಲಿರುವ ದಲಿತ ಜನಾಗ್ರಹ ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದ ಸುಮಾರು 500ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಅಭಿವೃದ್ಧಿ ಹಾಗೂ ಉದ್ಧಾರದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದುವರೆಗೆ ದಲಿತರ ಶ್ರೇಯೋಭಿವೃದ್ಧಿಗೆ ಯಾವುದೇ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ದಲಿತರು ಹಾಗೂ ಹಿಂದುಳಿದ ವರ್ಗಗಳ ಶ್ರಮ ಮತ್ತು ಬೆಂಬಲ ಪ್ರಮುಖವಾಗಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಸರ್ಕಾರ ಹಿಂದುಳಿದವರು ಮತ್ತು ದಲಿತರ ಪರವಾಗಿ ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡುವ ಉದ್ದೇಶದಿಂದಲೇ ಬೆಂಗಳೂರಿನಲ್ಲಿ ದಲಿತ ಜನಾಗ್ರಹ ಸಮಾವೇಶವನ್ನು ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಸರ್ಕಾರ ಹಿಂದುಳಿದ ವರ್ಗಗಳು ಹಾಗೂ ದಲಿತರ ಪರವಾಗಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡರೆ ಮಾತ್ರ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯ. ಇಲ್ಲವಾದರೆ ದಲಿತ ಸಮುದಾಯ ಸೂಕ್ತ ಉತ್ತರ ನೀಡಲಿದೆ ಎಂದು ಸುಂದರ ಮಾಸ್ತರ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪ್ರಧಾನ ಸಂಚಾಲಕ ವಸಂತ ಗಿಳಿಯಾರ್, ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಸುರೇಶ್ ಹಕ್ಲಾಡಿ, ಸುರೇಶ ಬಾರ್ಕೂರು ಮೊದಲಾದವರು ಉಪಸ್ಥಿತರಿದ್ದರು.