-->
 ಉಡುಪಿ ನಗರದಲ್ಲಿ ನಾಯಿಗಳ ಕಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಉಡುಪಿ ನಗರದಲ್ಲಿ ನಾಯಿಗಳ ಕಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು


ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಸಾಕು ಹಾಗೂ ಬೀದಿ ನಾಯಿಗಳ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಉಡುಪಿ ನಗರಸಭೆಯಲ್ಲಿ ಆರೋಗ್ಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಸತೀಶ್ (35) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಮೇ 27, 2026ರಂದು ಬೆಳಿಗ್ಗೆ 11.30 ಗಂಟೆಗೆ ನಗರಸಭೆ ಪೌರಾಯುಕ್ತರ ಆದೇಶದಂತೆ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಕೊಳದಪೇಟೆ ರಸ್ತೆಯ ಸಾಯಿ ಹರ್ಷ ಸ್ವೈಯರ್ ಕಟ್ಟಡದ ಬಳಿಯಿರುವ ಮನೆಗೆ ಸ್ಥಳ ಪರಿಶೀಲನೆಗಾಗಿ ಭೇಟಿ ನೀಡಲಾಗಿತ್ತು.

ಈ ವೇಳೆ ಮನೆ ಸಮೀಪ ಇಬ್ಬರು ವ್ಯಕ್ತಿಗಳು ಇದ್ದು, ಅವರಲ್ಲಿ ಒಬ್ಬರನ್ನು ವರುಣ್ ಖೆಮಾನಿ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಹೆಸರು ತಿಳಿದುಬಂದಿಲ್ಲ. ಸಾರ್ವಜನಿಕರಿಂದ ಬೀದಿ ನಾಯಿಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದಾಗ ಆರೋಪಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪರಿಶೀಲನೆ ವೇಳೆ ಮನೆಯ ಕಾಂಪೌಂಡ್‌ನಿಂದ ಮೂರು ನಾಯಿಗಳು ರಸ್ತೆಯತ್ತ ಬರುತ್ತಿರುವುದು ಹಾಗೂ ಇನ್ನೂ ಕೆಲವು ನಾಯಿಗಳು ಮನೆಯ ಅಂಗಳದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಿರುವುದು ಕಂಡುಬಂದಿದ್ದು, ಅವುಗಳನ್ನು ನಿಯಂತ್ರಿಸಲು ಅಥವಾ ಕಟ್ಟಿ ಹಾಕಲು ಯಾವುದೇ ವ್ಯವಸ್ಥೆ ಇರಲಿಲ್ಲ ಎಂದು ತಿಳಿಸಲಾಗಿದೆ.

ಸ್ಥಳೀಯ ನಿವಾಸಿಗಳೊಂದಿಗೆ ವಿಚಾರಿಸಿದಾಗ, ನಾಯಿಗಳು ಶಾಲೆಗೆ ತೆರಳುವ ಮಕ್ಕಳನ್ನು, ಬೆಳಿಗ್ಗೆ ವಾಕಿಂಗ್ ಮಾಡುವ ವೃದ್ಧರನ್ನು, ದ್ವಿಚಕ್ರ ವಾಹನ ಸವಾರರನ್ನು ಬೆನ್ನಟ್ಟಿ ಹೋಗುವುದು, ಕಚ್ಚಲು ಯತ್ನಿಸುವುದು ಹಾಗೂ ವಾಹನಗಳಿಗೆ ಅಡ್ಡಬಂದು ಅಪಘಾತ ಸಂಭವಿಸುವ ಆತಂಕ ಸೃಷ್ಟಿಸುತ್ತಿರುವ ಬಗ್ಗೆ ಮಾಹಿತಿ ನೀಡಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.

ನಗರಸಭೆ ಅಧಿಕಾರಿಗಳು ನಾಯಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರೂ, ಆರೋಪಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 75/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 291, 292 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Ads on article

Advertise in articles 1

advertising articles 2

Advertise under the article