ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ
ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತನನ್ನು ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ ಅಲಿಯಾಸ್ ಕೆ.ಎಂ. ಸಲಾಂ ಅಲಿಯಾಸ್ ಡಾಲರ್ ಸಲಾಂ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ವಿಟ್ಲ ಪೊಲೀಸ್ ಠಾಣೆಯಲ್ಲಿ 2020 ಹಾಗೂ 2022ರಲ್ಲಿ ದಾಖಲಾಗಿ್ದ್ದ ಕಳ್ಳತನ ಪ್ರಕರಣಗಳ ಆರೋಪಿ ಮೊಹಮ್ಮದ್ ಸಲಾಂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ವಿಟ್ಲ ಠಾಣೆ ಪೊಲೀಸರು, ಜೂನ್ 16ರಂದು ಪುತ್ತೂರು ರೈಲ್ವೆ ನಿಲ್ದಾಣದ ಸಮೀಪ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 45/2023ರಡಿ ಐಪಿಸಿ ಕಲಂ 353, 332 ಹಾಗೂ 504ರ ಅಡಿಯಲ್ಲಿ ಮತ್ತೊಂದು ಪ್ರಕರಣವೂ ದಾಖಲಾಗಿತ್ತು. ಆ ಪ್ರಕರಣದಲ್ಲಿಯೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಾರಣ ಬಂಧನ ವಾರಂಟ್ ಜಾರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.