NEET ಪರೀಕ್ಷಾ ಭದ್ರತೆಗೆ ಟೆಲಿಗ್ರಾಂ ನಿರ್ಬಂಧ ಸರಿ: ದೆಹಲಿ ಹೈಕೋರ್ಟ್ ತೀರ್ಪು
NEET-UG 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.
ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಂ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಏಕಸದಸ್ಯ ಪೀಠ ಜೂನ್ 18ರಂದು ವಿಚಾರಣೆ ನಡೆಸಿತ್ತು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ಇದೀಗ ಅರ್ಜಿಯನ್ನು ವಜಾಗೊಳಿಸಿದ್ದು, ಸರ್ಕಾರದ ಕ್ರಮವನ್ನು ಸಮರ್ಥಿಸಿದೆ.
ತೀರ್ಪಿನಲ್ಲಿ ನ್ಯಾಯಾಲಯ, “ಸರ್ಕಾರದ ಕ್ರಮವು ಕನಿಷ್ಠ ಮಟ್ಟದ ನಿರ್ಬಂಧವಾಗಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಲಾಗಿದೆ. ಆದ್ದರಿಂದ ಈ ಆದೇಶ ಅಸಮಾನ ಅಥವಾ ಅನ್ಯಾಯಕರ ಎಂದು ಹೇಳಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟಿದೆ.
ಜೂನ್ 21ರಂದು ನಡೆಯಲಿರುವ NEET-UG ಮರುಪರೀಕ್ಷೆಗೆ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಸೇವೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಅಲ್ಲದೆ, ಜೂನ್ 30ರವರೆಗೆ ಈಗಾಗಲೇ ಪೋಸ್ಟ್ ಮಾಡಲಾದ ಸಂದೇಶಗಳನ್ನು ಸಂಪಾದಿಸುವ ಸೌಲಭ್ಯವನ್ನು ನಿಷ್ಕ್ರಿಯಗೊಳಿಸುವಂತೆ ಟೆಲಿಗ್ರಾಂ ವೇದಿಕೆಗೆ ಸೂಚಿಸಲಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಪರೀಕ್ಷಾ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಯಾವುದೇ ರೀತಿಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಈ ನಿರ್ಧಾರ ಅಗತ್ಯವಾಗಿದೆ ಎಂದು ಸರ್ಕಾರ ವಾದಿಸಿತ್ತು.
ಮೇ 3ರಂದು ನಡೆದಿದ್ದ NEET-UG ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದ ಕಾರಣ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಬಳಿಕ ಮರುಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ ಮುಂದುವರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.