-->
ಆಗುಂಬೆ ಘಾಟ್ ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಆಗುಂಬೆ ಘಾಟ್ ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ


ಆಗುಂಬೆ ಘಾಟಿಯಲ್ಲಿ ವಾಹನ ದಟ್ಟಣೆ, ಟ್ರಾಫಿಕ್ ಜಾಮ್ ಹಾಗೂ ಕೆಲ ತಿರುವುಗಳ ದಂಡೆ ಕುಸಿಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.


ಹುಲಿಕಲ್ ಘಾಟಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಕಾರಣ ಆಗುಂಬೆ ಘಾಟಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ನಿರ್ಬಂಧಗಳಿದ್ದರೂ ಜಲ್ಲಿಕಲ್ಲು ಹಾಗೂ ಭಾರೀ ವಾಹನಗಳ ಸಂಚಾರ ಮುಂದುವರಿಯುತ್ತಿರುವುದು ಭೂಕುಸಿತದ ಅಪಾಯವನ್ನು ಹೆಚ್ಚಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪರಿಶೀಲನೆ ಬಳಿಕ ಮಾತನಾಡಿದ ಸಂಸದರು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಘಾಟಿಯ ತಿರುವುಗಳ ದಂಡೆಗಳಲ್ಲಿ ಸುಮಾರು ಸಾವಿರ ಮೀಟರ್ ಉದ್ದದ ತಡೆಬೇಲಿ ನಿರ್ಮಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ ಘಾಟಿ ರಸ್ತೆಯ ಕುಸಿತ ಭಾಗಗಳ ದುರಸ್ತಿ ಹಾಗೂ ಅಭಿವೃದ್ಧಿಗೆ ಕೇಂದ್ರ ಸರ್ಕಾರದ CRIF ಯೋಜನೆಯಡಿ 15 ಕೋಟಿ ರೂಪಾಯಿ ಮಂಜೂರಾಗಿದ್ದು, ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದರು.

ಘಾಟಿ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಸುರಂಗ ಮಾರ್ಗ ಹಾಗೂ ರಸ್ತೆ ದ್ವಿಪಥೀಕರಣಕ್ಕೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ. ಸಾಧ್ಯತಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಭಾರೀ ವಾಹನಗಳ ಸಂಚಾರವನ್ನು ನಿಯಂತ್ರಿಸದಿದ್ದರೆ ಮಳೆಗಾಲದಲ್ಲಿ ಘಾಟಿ ಕುಸಿತದ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ ಸಂಸದರು, ಈ ಕುರಿತು ಜಿಲ್ಲಾಡಳಿತಕ್ಕೆ ಅಗತ್ಯ ಸಲಹೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಸ್ತೆ ದ್ವಿಪಥೀಕರಣಕ್ಕೆ ಅಗತ್ಯವಿರುವ ಅರಣ್ಯ ಇಲಾಖೆಯ ಅನುಮತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ.

Ads on article

Advertise in articles 1

advertising articles 2

Advertise under the article