11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಮೂಲತಃ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ನಿವಾಸಿ ಚುಂಕಿ ಆಕಾಶಭವನ ಯಾನೆ ಸಂತೋಷ್ ಎಸ್. (34) ಎಂದು ಗುರುತಿಸಲಾಗಿದೆ.
2015ರಲ್ಲಿ ಮಂಗಳೂರಿನ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಶಾಸ್ತ್ರದ ವೇಳೆ ಅಶೋಕ ಕುಮಾರ್ ಕೊಟ್ಟಾರಿ ಹಾಗೂ ಜಗ್ಗು ಎಂಬಾತನ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಚುಂಕಿ ಆಕಾಶಭವನ, ರಂಜಿತ್, ಧನು, ಧೂಮ, ಸ್ವೀಟಿ ಯಾನೆ ನರೇಶ್ ಹಾಗೂ ಜಗ್ಗು ಸೇರಿದಂತೆ ಇತರರು ಸೇರಿಕೊಂಡು ಅಶೋಕ ಕುಮಾರ್ ಕೊಟ್ಟಾರಿ ಅವರ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 135/2015ರ ಅಡಿಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಪ್ರಮುಖ ಆರೋಪಿ ಚುಂಕಿ ಆಕಾಶಭವನ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ನ್ಯಾಯಾಲಯವು ಎಲ್‌ಪಿಸಿ (LPC) ವಾರಂಟ್ ಜಾರಿಗೊಳಿಸಿತ್ತು.
ಆರೋಪಿಯ ಸುಳಿವಿಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಪೊಲೀಸರು, ಆತ ಶಿವಮೊಗ್ಗ ಭಾಗದಲ್ಲಿ ಸಂಚರಿಸುತ್ತಿರುವ ಮಾಹಿತಿ ಕಲೆಹಾಕಿದ್ದರು. ಅದರ ಆಧಾರದ ಮೇಲೆ ಜುಲೈ 29ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.