ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ 1.44 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳ ಕಳ್ಳತನ
ಕುಂದಾಪುರದ ಮರವಂತೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಜ್ಯುವೆಲ್ಲರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಬೆಳ್ಳಿ ಆಭರಣಗಳು ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮರವಂತೆ ಗ್ರಾಮದ ಮಾರುತಿ ಕಾಂಪ್ಲೆಕ್ಸ್‌ನಲ್ಲಿರುವ ವಿಶ್ವನಾಥ ಪೂಜಾರಿ ಅವರಿಗೆ ಸೇರಿದ ಜ್ಯುವೆಲ್ಲರಿ ಅಂಗಡಿಯಲ್ಲಿ ಜುಲೈ 4ರ ರಾತ್ರಿ ಹಾಗೂ ಜುಲೈ 5ರ ಮುಂಜಾನೆ ನಡುವಿನ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ಗ್ಯಾಸ್ ಕಟ್ಟರ್‌ನಿಂದ ಅಂಗಡಿಯ ಶಟರ್ ಕತ್ತರಿಸಿ ಒಳಪ್ರವೇಶಿಸಿದ ದುಷ್ಕರ್ಮಿಗಳು ಸುಮಾರು 600 ಗ್ರಾಂ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದು, ಇದರ ಅಂದಾಜು ಮೌಲ್ಯ 1.44 ಲಕ್ಷ ರೂಪಾಯಿ ಎಂದು ತಿಳಿದು ಬಂದಿದೆ. ಅಲ್ಲದೆ ಅಂಗಡಿಯ ಡ್ರಾಯರ್‌ನಲ್ಲಿದ್ದ 1,000 ರೂ. ನಗದನ್ನೂ ದೋಚಿದ್ದಾರೆ.
ಕೃತ್ಯ ಎಸಗುವ ಮೊದಲು ಕಳ್ಳರು ಸುತ್ತಮುತ್ತಲಿನ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಹಾನಿಗೊಳಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದರಿಂದ ಕಳ್ಳರು ಪೂರ್ವಯೋಜಿತವಾಗಿ ಸ್ಥಳವನ್ನು ಆಯ್ಕೆ ಮಾಡಿಕೊಂಡು ಕಳ್ಳತನ ನಡೆಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್, ಗಂಗೊಳ್ಳಿ ಪಿಎಸ್‌ಐ ಪವನ್ ನಾಯಕ್, ಸಿಬ್ಬಂದಿ ಸುದರ್ಶನ್ ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖೆ ಮುಂದುವರಿದಿದೆ.