ಜು.25-26 :'ಎಸ್ಐಆರ್ ಮಹಾ ಸಂಪರ್ಕ ಅಭಿಯಾನ'
Wednesday, July 22, 2026
ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ ಜುಲೈ 25 ಮತ್ತು 26ರಂದು ರಾಜ್ಯಾದ್ಯoತ ನಡೆಯಲಿರುವ 'ಎಸ್ಐಆರ್ ಮಹಾ ಸಂಪರ್ಕ ಅಭಿಯಾನ'ವನ್ನು ಜಿಲ್ಲೆಯಾದ್ಯoತ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 'ಎಸ್ಐಆರ್ ಮಹಾ ಸಂಪರ್ಕ ಅಭಿಯಾನ'ದ ಎರಡೂ ದಿನಗಳಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಮನೆ ಮನೆ ಭೇಟಿಯ ಮೂಲಕ 'ಎಸ್ಐಆರ್' ಪ್ರಕ್ರಿಯೆಗೆ ವೇಗ ನೀಡುವ ಜೊತೆಗೆ ಜುಲೈ 26ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕೀ ಬಾತ್' ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ವೀಕ್ಷಿಸಿ, ವಿವರವನ್ನು 'ಸರಲ್ ಆಪ್'ನಲ್ಲಿ ಅಪ್ಲೋಡ್ ಮಾಡುವ ಮೂಲಕ ಉಡುಪಿ ಜಿಲ್ಲೆ 100% ಸಾಧನೆ ದಾಖಲಿಸುವಂತೆ ಬದ್ಧತೆಯಿಂದ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.
ಬಿಜೆಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು ಮುಂದಿನ ವರ್ಷಾoತ್ಯದಲ್ಲಿ ಪೂರ್ಣಗೊಳ್ಳಲಿದೆ. ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯ ವಿರುದ್ದ ಕರಾವಳಿಯಾದ್ಯಂತ ಬೃಹತ್ ಹೋರಾಟದ ರೂಪುರೇಷೆಗಳನ್ನು ಸಿದ್ದಪಡಿಸಲಾಗುವುದು ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಮಾಹಿತಿ ನೀಡಿದರು. ಮಂಡಲಗಳ ಹಾಗೂ ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಚಟುವಟಿಕೆಗಳ ವಿಸ್ತ್ರತ ವರದಿಯನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಮುಖರು, ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್ ಗೀತೆ ಹಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ ಸ್ವಾಗತಿಸಿ, ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.