56% ಮೀಸಲಾತಿ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಿ: ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹ
ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಜಾರಿಗೆ ತರಲಾಗಿರುವ 56% ಮೀಸಲಾತಿ ಕಾಯ್ದೆಯನ್ನು ತಕ್ಷಣವೇ ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸಬೇಕು. ಜೊತೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ನಕಲಿ ಜಾತಿ ಪ್ರಮಾಣಪತ್ರಗಳ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು.
ಉಡುಪಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂಬ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನ್ಯಾಯಮೂರ್ತಿ ನಾಗಮೋಹನದಾಸ್ ಹಾಗೂ ನ್ಯಾಯಮೂರ್ತಿ ಸುಭಾಷ್ ಆಡಿ ಆಯೋಗಗಳ ವರದಿಗಳ ಆಧಾರದ ಮೇಲೆ ಎಸ್‌ಸಿ ಮೀಸಲಾತಿಯನ್ನು 15%ರಿಂದ 17%ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು 3%ರಿಂದ 7%ಕ್ಕೆ ಹೆಚ್ಚಿಸಿ 2022ರಲ್ಲಿ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತಂದಿತ್ತು. ಆದರೆ ಈ ಕಾಯ್ದೆಯನ್ನು ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸದಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಹೈಕೋರ್ಟ್ 56% ಮೀಸಲಾತಿ ಜಾರಿಗೆ ತಡೆಯಾಜ್ಞೆ ನೀಡಿದೆ ಎಂದು ಹೇಳಿದರು. ಈ ತಡೆಯಾಜ್ಞೆಯಿಂದ 2023-24 ಹಾಗೂ 2024-25ನೇ ಸಾಲಿನಲ್ಲಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಸಾವಿರಾರು ವಿದ್ಯಾರ್ಥಿಗಳು ಮತ್ತು ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಅವರು ಆರೋಪಿಸಿದರು.
ಈ ಸಂಬಂಧ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದ್ದರೂ, ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರುವಲ್ಲಿ ವಿಫಲವಾಗಿದೆ ಎಂದು ಉಗ್ರಪ್ಪ ಟೀಕಿಸಿದರು.
ರಾಜ್ಯದಲ್ಲಿ ಲಕ್ಷಾಂತರ ಮಂದಿ ನಕಲಿ ಎಸ್‌ಸಿ ಮತ್ತು ಎಸ್‌ಟಿ ಜಾತಿ ಪ್ರಮಾಣಪತ್ರಗಳನ್ನು ಪಡೆದು ನೈಜ ಫಲಾನುಭವಿಗಳಿಗೆ ಮೀಸಲಾಗಿರುವ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದರಿಂದ ನಿಜವಾದ ಅರ್ಹರಿಗೆ ಅವಕಾಶಗಳು ತಪ್ಪುತ್ತಿದ್ದು, ಸಾಮಾಜಿಕ ನ್ಯಾಯದ ಆಶಯಕ್ಕೆ ಧಕ್ಕೆಯಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಮೀಸಲಾತಿ ರಕ್ಷಣೆಗಾಗಿ ರಾಜ್ಯ ಸರ್ಕಾರ ತಕ್ಷಣವೇ ಸರ್ವಪಕ್ಷಗಳ ಸಭೆ ಕರೆಯಬೇಕು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದೊಯ್ದು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ 56% ಮೀಸಲಾತಿ ಕಾಯ್ದೆಯನ್ನು ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸಲು ಒತ್ತಾಯಿಸಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಮಂಜುನಾಥ ಮಡ್ಲೂರು, ಪ್ರಕಾಶ್ ನಾಗಪ್ಪ ದೇಸಾಯಿ, ಹನುಮಂತರಾಯಪ್ಪ ಹಾಗೂ ನರಸಿಂಹ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.