ನಿಟ್ಟೂರು ಸಮೀಪ ಹೆದ್ದಾರಿಯಲ್ಲಿ ಜೀವಕ್ಕೆ ಕುತ್ತಾದ ಬೃಹತ್ ರಸ್ತೆ ಗುಂಡಿ
Saturday, July 25, 2026
ರಾಷ್ಟ್ರೀಯ ಹೆದ್ದಾರಿ-66ರ ನಿಟ್ಟೂರು ಸಮೀಪದ ಹುಂಡೈ ಶೋ ರೂಂ ಎದುರಿನ ಹೆದ್ದಾರಿಯಲ್ಲಿ ದೊಡ್ಡ ಗಾತ್ರದ ಗುಂಡಿ ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ತಕ್ಷಣವೇ ಶಾಶ್ವತ ದುರಸ್ತಿ ಕೈಗೊಳ್ಳುವಂತೆ ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಹೆದ್ದಾರಿಯಲ್ಲಿ ಉಂಟಾಗಿರುವ ಈ ದೊಡ್ಡ ಗಾತ್ರದ ರಸ್ತೆ ಗುಂಡಿಯಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ವಿಶೇಷವಾಗಿ ರಾತ್ರಿ ವೇಳೆ ರಸ್ತೆ ಗುಂಡಿ ಸ್ಪಷ್ಟವಾಗಿ ಕಾಣಿಸದ ಕಾರಣ ದ್ವಿಚಕ್ರ ಹಾಗೂ ಇತರ ವಾಹನ ಸವಾರರು ಅಪಾಯವನ್ನು ಎದುರಿಸುತ್ತಿದ್ದಾರೆ. ಈಗಾಗಲೇ ಹಲವು ದ್ವಿಚಕ್ರ ವಾಹನ ಸವಾರರು ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ರಸ್ತೆಯ ದುಸ್ಥಿತಿಯಿಂದ ಯಾವುದೇ ಕ್ಷಣದಲ್ಲಿ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, "ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ವಿಳಂಬ ಮಾಡದೆ ಸ್ಥಳ ಪರಿಶೀಲನೆ ನಡೆಸಿ ರಸ್ತೆ ಗುಂಡಿಯನ್ನು ಶಾಶ್ವತವಾಗಿ ದುರಸ್ತಿ ಮಾಡಬೇಕು. ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಸಂಭವನೀಯ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವುದು ಅತ್ಯಗತ್ಯ" ಎಂದು ತಿಳಿಸಿದ್ದಾರೆ.
ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ರಸ್ತೆ ದುರಸ್ತಿ ಕಾರ್ಯವನ್ನು ತಕ್ಷಣ ಆರಂಭಿಸುವ ಮೂಲಕ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು ಆಗ್ರಹಿಸಿದ್ದಾರೆ.
