ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡುವ ನಿರ್ಧಾರ ದೇಶದ ಆಂತರಿಕ ಭದ್ರತೆಗೆ ಧಕ್ಕೆ: ಶಾಸಕ ಯಶ್ಪಾಲ್ ಸುವರ್ಣ
ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕ್ರಮವು ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವಂತದ್ದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ತನ್ನ ರಾಜಕೀಯ ಉದ್ದೇಶಗಳಿಗಾಗಿ ಕಾನೂನು ಮತ್ತು ಸಂವಿಧಾನದ ನಿಯಮಗಳನ್ನು ಮೀರಿ ಅಕ್ರಮ ವಲಸಿಗರನ್ನು ರಕ್ಷಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು. ಬಾಂಗ್ಲಾದೇಶ ಸೇರಿದಂತೆ ವಿವಿಧ ದೇಶಗಳಿಂದ ಅಕ್ರಮವಾಗಿ ಬಂದಿರುವ ವಲಸಿಗರಿಗೆ ಪಿಆರ್‌ಸಿ ನೀಡುವ ಮೂಲಕ ಮತದಾರರ ಪಟ್ಟಿಯಲ್ಲಿ ಅವರನ್ನು ಮುಂದುವರಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಅವರು ಹೇಳಿದರು.
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಯಶ್ ಪಾಲ್ ಸುವರ್ಣ, ಅನರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಚುನಾವಣಾ ಆಯೋಗದ ಕ್ರಮವನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಹೇಳಿದರು.
ಅಕ್ರಮ ವಲಸಿಗರು ಮತ್ತು ನುಸುಳುಕೋರರಿಗೆ ಆಶ್ರಯ ನೀಡುವ ಮೂಲಕ ರಾಜ್ಯದ ಭದ್ರತೆ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದ್ದು, ಕರ್ನಾಟಕವನ್ನು ರಾಷ್ಟ್ರವಿರೋಧಿ ಹಾಗೂ ಭಯೋತ್ಪಾದಕ ಚಟುವಟಿಕೆಗಳಿಗೆ ಅನುಕೂಲಕರ ನೆಲೆಯನ್ನಾಗಿ ಮಾಡುವ ಅಪಾಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಯ ನಂತರ ಅನರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಆತಂಕಗೊಂಡಿದೆ ಎಂದು ಅವರು ಆರೋಪಿಸಿದರು.
ಅನರ್ಹರಿಗೆ ಪಿಆರ್‌ಸಿ ನೀಡುವ ಪ್ರಸ್ತಾವವನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದ ಅವರು, ಸರ್ಕಾರ ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಜನರು ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ ಯಶ್ ಪಾಲ್ ಸುವರ್ಣ, ದೇಶದ ಆಂತರಿಕ ಭದ್ರತೆ ಮತ್ತು ಚುನಾವಣಾ ವ್ಯವಸ್ಥೆಯ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.