ಬಿಜೆಪಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರು- ದೇಶದ್ರೋಹಿಗಳು ಎಂಬಂತೆ ಬಿಂಬಿಸಿರುವುದು ಖಂಡನೀಯ- ಪ್ರಸಾದ್ ರಾಜ್ ಕಾಂಚನ್
ಉಡುಪಿ ಶಾಸಕರು ಇಂದು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ಭಯೋತ್ಪಾದಕರಂತೆ ಬಿಂಬಿಸಿರುವುದು ಹಾಗೂ ಸಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ಹೀಯಾಳಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶವ್ಯಾಪಿ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಇದರ ಪರಿಣಾಮವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಕೇಂದ್ರ ಸರ್ಕಾರ ನೀಟ್ ಪರೀಕ್ಷಾ ಅವ್ಯವಸ್ಥೆಯನ್ನು ಒಪ್ಪಿಕೊಂಡು ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದಲ್ಲದೆ, ಭವಿಷ್ಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯುವ ಉದ್ದೇಶದಿಂದ ಸಂಸತ್ತಿನಲ್ಲಿ ಕಠಿಣ ಕಾನೂನು ಜಾರಿಗೆ ತಂದಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಬಿಜೆಪಿ ನಾಯಕರು ನಡೆಸಿರುವ ಪ್ರತಿಭಟನೆ ಅಚ್ಚರಿ ಮೂಡಿಸುವಂತದ್ದು ಎಂದು ಅವರು ಟೀಕಿಸಿದ್ದಾರೆ. ಎನ್‌ಡಿಎ ಸರ್ಕಾರವೇ ತನ್ನ ತಪ್ಪನ್ನು ಒಪ್ಪಿಕೊಂಡು ಕ್ರಮ ಕೈಗೊಂಡಿದ್ದರೂ, ಉಡುಪಿ ಬಿಜೆಪಿ ಮುಖಂಡರು ಈ ವಿಚಾರದಲ್ಲಿ ಪ್ರತಿಭಟನೆ ನಡೆಸಿರುವುದು ಅಸಂಗತವಾಗಿದೆ ಎಂದು ಹೇಳಿದ್ದಾರೆ.
ಇಂದು ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಅಸಂಬದ್ಧ ಹೇಳಿಕೆಗಳನ್ನು ನೀಡಿ, ವಿದ್ಯಾರ್ಥಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ಭಯೋತ್ಪಾದಕರಂತೆ ಬಿಂಬಿಸಿರುವುದು ಹಾಗೂ ಸಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ಹೀಯಾಳಿಸಿರುವುದು ಖಂಡನೀಯ. ಇಂತಹ ಹೇಳಿಕೆಗಳು ಬಿಜೆಪಿ ಪಕ್ಷದ ಘನತೆಗೆ ಶೋಭೆ ತರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರತಿಭಟನೆಯ ವೇಳೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡಿರುವುದು ಖಂಡನೀಯ. ಶಿಕ್ಷಣ ಸಚಿವರ ರಾಜೀನಾಮೆಗಾಗಿ ಹೋರಾಟ ನಡೆಸಿದ ವಿದ್ಯಾರ್ಥಿ ಸಮುದಾಯವನ್ನು ದೇಶದ್ರೋಹಿಗಳು ಮತ್ತು ಭಯೋತ್ಪಾದಕರಂತೆ ಬಿಂಬಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಪ್ರಸಾದ್ ರಾಜ್ ಕಾಚನ್ ತಿಳಿಸಿದ್ದಾರೆ.