ಹೆಬ್ರಿ–ಪರ್ಕಳ ರಾ. ಹೆ ಕಾಮಗಾರಿಗೆ ಗ್ರೀನ್ ಸಿಗ್ನಲ್: ಅರಣ್ಯ ಭೂಮಿ ಹಸ್ತಾಂತರಕ್ಕೆ ರಾಜ್ಯ ಸರ್ಕಾರ ಅನುಮೋದನೆ
ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ಹೆಬ್ರಿ–ಪರ್ಕಳ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್–169ಎ) ಕಾಮಗಾರಿಗೆ ಹೊಸ ಚೈತನ್ಯ ಸಿಕ್ಕಿದ್ದು, ಕಾಮಗಾರಿಗೆ ಅಡ್ಡಿಯಾಗಿದ್ದ ಅರಣ್ಯ ಭೂಮಿ ಹಸ್ತಾಂತರಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಹೆಬ್ರಿ–ಪರ್ಕಳ ನಡುವಿನ ಮುಳ್ಳುಗುಡ್ಡೆ ಸಮೀಪ ಸುಮಾರು 1.2 ಕಿಲೋಮೀಟರ್ ರಸ್ತೆ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುತ್ತಿರುವ ಕಾರಣ ಕಾಮಗಾರಿ ಸ್ಥಗಿತಗೊಂಡಿತ್ತು. 2023ರಿಂದ ಅರಣ್ಯ ಇಲಾಖೆಯ ಅನುಮೋದನೆಗಾಗಿ ಸಲ್ಲಿಸಲಾಗಿದ್ದ ಪ್ರಸ್ತಾವನೆ ಪರಿಸರ ಪೋರ್ಟಲ್‌ನಲ್ಲಿ ಬಾಕಿ ಉಳಿದಿತ್ತು.
ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ನಿರಂತರ ಪ್ರಯತ್ನದ ಫಲವಾಗಿ, ಉಡುಪಿ ತಾಲೂಕಿನ ಪೆಡೂರು ಗ್ರಾಮದ 2.35 ಹೆಕ್ಟೇರ್ ಹಾಗೂ ಹೆಬ್ರಿ ಗ್ರಾಮದ 0.064 ಹೆಕ್ಟೇರ್ ಸೇರಿದಂತೆ ಒಟ್ಟು 2.49 ಹೆಕ್ಟೇರ್ ಅರಣ್ಯ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಈ ನಿರ್ಧಾರದಿಂದ ಹೆಬ್ರಿ–ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಇದ್ದ ಪ್ರಮುಖ ಅಡ್ಡಿ ನಿವಾರಣೆಯಾಗಿದ್ದು, ಕಾಮಗಾರಿಯನ್ನು ಶೀಘ್ರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೆದ್ದಾರಿ ಕಾಮಗಾರಿ ಆರಂಭವಾಗುವುದರಿಂದ ಹೆಬ್ರಿ, ಪರ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಂಚಾರ ವ್ಯವಸ್ಥೆ ಸುಧಾರಿಸುವ ನಿರೀಕ್ಷೆ ವ್ಯಕ್ತವಾಗಿದ್ದು, ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಿದಂತಾಗಿದೆ.