ಕಮಲಶಿಲೆ–ಯಳಬೇರು ಸಂಪರ್ಕ ರಸ್ತೆಯಲ್ಲಿ ಭೂಕುಸಿತದ ಆತಂಕ: ಶಾಶ್ವತ ಪರಿಹಾರಕ್ಕೆ ಆಗ್ರಹ
ಕಮಲಶಿಲೆಯಿಂದ ಯಳಬೇರು ಸಂಪರ್ಕಿಸುವ ಪ್ರಮುಖ ರಸ್ತೆಯೊಂದರಲ್ಲಿ ರಸ್ತೆ ಬದಿ ಬರೆ ಕುಸಿದಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ರಸ್ತೆ ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದೇ ಭೂಕುಸಿತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಭೂಕುಸಿತದಿಂದ ಮಣ್ಣು ಹಾಗೂ ಬಂಡೆಗಳು ರಸ್ತೆಯ ಮೇಲೆ ಜಾರಿದ್ದು, ರಸ್ತೆಯ ಒಂದು ಭಾಗ ಅಪಾಯದ ಸ್ಥಿತಿಯಲ್ಲಿದೆ. ಮಳೆ ಮುಂದುವರಿದರೆ ಇನ್ನಷ್ಟು ಭೂಕುಸಿತ ಸಂಭವಿಸಿ ರಸ್ತೆ ಸಂಪೂರ್ಣವಾಗಿ ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕಮಲಶಿಲೆ ಹಾಗೂ ಯಳಬೇರು ಭಾಗದ ಜನರಿಗೆ ಈ ರಸ್ತೆ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ಪ್ರತಿದಿನ ನೂರಾರು ವಾಹನಗಳು, ಶಾಲಾ ಬಸ್‌ಗಳು ಹಾಗೂ ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಸಂಚರಿಸುವುದರಿಂದ ಸಾರ್ವಜನಿಕರ ಸುರಕ್ಷತೆ ಬಗ್ಗೆ ಗಂಭೀರ ಆತಂಕ ವ್ಯಕ್ತವಾಗಿದೆ.
ಅಪಾಯ ಮತ್ತಷ್ಟು ಹೆಚ್ಚುವ ಮುನ್ನ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿ, ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸ್ಥಳೀಯರು ಹಲವು ಬಾರಿ ಸಮಸ್ಯೆಯನ್ನು ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದ್ದು, ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.