ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕ್ಷಮೆ ಕೇಳಬೇಕು: ನವೀನ್ ಸಾಲಿಯಾನ್
ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಅತ್ಯಂತ ಖಂಡನೀಯ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲಿಯಾನ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಲಕ್ಷಾಂತರ ವಿದ್ಯಾರ್ಥಿಗಳು ಒಂದು ತಿಂಗಳಿಗೂ ಅಧಿಕ ಕಾಲ ವಿವಿಧೆಡೆ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಹೋರಾಟದಿಂದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಉಂಟಾಗಿದ್ದು, ಕೇಂದ್ರ ಸರ್ಕಾರವು ನೀಟ್ ಪರೀಕ್ಷೆಯಲ್ಲಿನ ಅವ್ಯವಸ್ಥೆಯನ್ನು ಒಪ್ಪಿಕೊಂಡು ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಕಠಿಣ ಕಾನೂನು ಜಾರಿಗೊಳಿಸಿದ್ದರೂ, ಉಡುಪಿ ಬಿಜೆಪಿ ನಾಯಕರು ವಿದ್ಯಾರ್ಥಿಗಳ ಹೋರಾಟವನ್ನು ಟೀಕಿಸುತ್ತಿರುವುದು ಆಶ್ಚರ್ಯಕರ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ ಜಿಲ್ಲೆಯ ಶಾಸಕರು ವಿದ್ಯಾರ್ಥಿ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ. ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಬಿಜೆಪಿ ಪಕ್ಷಕ್ಕೂ ಶೋಭೆ ತರುವುದಿಲ್ಲ ಎಂದು ನವೀನ್ ಸಾಲಿಯಾನ್ ಟೀಕಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಹ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿರುವ ಅವರು, ಸಾಂವಿಧಾನಿಕ ಹುದ್ದೆಯಲ್ಲಿರುವ ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. 2024ರಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಡೆದ ಬಳಿಕ ಕಾನೂನು ತಿದ್ದುಪಡಿ ಮಾಡಿದರೂ, ಈ ವರ್ಷವೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ವೈಫಲ್ಯ ಎದುರಾದಾಗಲೆಲ್ಲ ಕಾನೂನು ಬದಲಿಸುವುದರಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವುದಿಲ್ಲ. ಕಳೆದ ಹಲವು ವರ್ಷಗಳ ಆಡಳಿತ ವೈಫಲ್ಯವನ್ನು ಹೊಸ ಮಸೂದೆಗಳಿಂದ ಮುಚ್ಚಿಹಾಕಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಒಡೆದುಹೋದ ಕನಸುಗಳನ್ನು ಯಾವುದೇ ಕಾನೂನು ಮರುಜೋಡಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯನ್ನು ವಿರೋಧಿಸಿ ಹೋರಾಟ ನಡೆಸಿದ ವಿದ್ಯಾರ್ಥಿಗಳನ್ನು ದೇಶದ್ರೋಹಿಗಳು ಹಾಗೂ ಭಯೋತ್ಪಾದಕರಂತೆ ಬಿಂಬಿಸಿರುವುದು ಖಂಡನೀಯ. ಈ ಸಂಬಂಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿದ್ಯಾರ್ಥಿಗಳ ಹಾಗೂ ಉಡುಪಿ ಜಿಲ್ಲೆಯ ಜನತೆಯ ಕ್ಷಮೆ ಕೋರಬೇಕು ಎಂದು ನವೀನ್ ಸಾಲಿಯಾನ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.