ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳನ ಬಂಧನ
ಮೇ 19ರಂದು ತಡರಾತ್ರಿ ಬೆಳ್ತಂಗಡಿಯ ವಿವಿಧೆಡೆ ಕಳ್ಳತನ ನಡೆಸಿ ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಿದ್ದ ಪ್ರಕರಣವನ್ನು ಭೇದಿಸಿರುವ ಬೆಳ್ತಂಗಡಿ ಪೊಲೀಸರು ಅಂತರ್‌ರಾಜ್ಯ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ತಮಿಳುನಾಡಿನ ಕೊಯಮುತ್ತೂರಿನ ಜಯಕುಮಾರ್ (55) ಎಂದು ಗುರುತಿಸಲಾಗಿದೆ. ಆರೋಪಿ ಬೆಳ್ತಂಗಡಿಯಲ್ಲಿ ಮಾತ್ರವಲ್ಲದೆ ಉಪ್ಪಿನಂಗಡಿ ಹಾಗೂ ಸುರತ್ಕಲ್ ಪ್ರದೇಶಗಳಲ್ಲಿಯೂ ಸರಣಿ ಕಳ್ಳತನ ನಡೆಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಜುಲೈ 8ರಂದು ಸಂಜೆ ಸುಮಾರು 6 ಗಂಟೆಗೆ ಗುರುವಾಯನಕೆರೆ ಜಂಕ್ಷನ್‌ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಬೆಳ್ತಂಗಡಿಯಲ್ಲಿ 3, ಉಪ್ಪಿನಂಗಡಿಯಲ್ಲಿ 2 ಹಾಗೂ ಸುರತ್ಕಲ್‌ನಲ್ಲಿ 1 ಸೇರಿದಂತೆ ಒಟ್ಟು 6 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ಆರೋಪಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಒಟ್ಟು 16 ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಆತ ಅಂತರ್‌ರಾಜ್ಯ ಮಟ್ಟದಲ್ಲಿ ಸಕ್ರಿಯವಾಗಿದ್ದ ಕುಖ್ಯಾತ ಕಳ್ಳ ಎಂಬುದು ತನಿಖೆಯಿಂದ ದೃಢಪಟ್ಟಿದೆ.
ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ., ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.