ದ. ಕ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ನಾಳೆಯೂ ರಜೆ..!
Thursday, July 02, 2026
ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಜುಲೈ 3ರಂದು (ಶುಕ್ರವಾರ) ರಜೆ ಘೋಷಿಸಲಾಗಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಮನೆಗಳಿಂದ ಹೊರಗೆ ಸಂಚರಿಸುವುದನ್ನು ತಪ್ಪಿಸುವಂತೆ ಹಾಗೂ ಹವಾಮಾನ ಇಲಾಖೆ ಮತ್ತು ಜಿಲ್ಲಾಡಳಿತ ನೀಡುವ ಅಧಿಕೃತ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲೆಯಲ್ಲಿ ಮುಂದುವರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು, ನದಿ ತೀರಗಳು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆಡಳಿತ ಮನವಿ ಮಾಡಿದೆ.