-->
ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ರಾಮಚಂದ್ರೇಗೌಡ ನಿಧನ

ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ರಾಮಚಂದ್ರೇಗೌಡ ನಿಧನ


ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ ಅವರು ಇಂದು ಮುಂಜಾನೆ ನಿಧನರಾದರು. 

ವಯೋಸಹಜ  ಅನಾರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ರಾಮಚಂದ್ರೇಗೌಡ ಅವರು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಹಿರಿಯ ನಾಯಕರಾಗಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಸೇರಿಸಿ ಪಕ್ಷದ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪಕ್ಷದ ಆರಂಭಿಕ ದಿನಗಳಿಂದಲೇ ಸಂಘಟನೆಯ ಬೆಳವಣಿಗೆಗೆ ಶ್ರಮಿಸಿದ ನಾಯಕರಲ್ಲಿ ಅವರು ಪ್ರಮುಖರಾಗಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ಹಿನ್ನೆಲೆಯುಳ್ಳ ರಾಮಚಂದ್ರೇಗೌಡ ಅವರು 1953ರಲ್ಲಿ ಸಂಘವನ್ನು ಸೇರುವ ಮೂಲಕ ಸಾರ್ವಜನಿಕ ಜೀವನ ಆರಂಭಿಸಿದ್ದರು. ಬಳಿಕ 1970ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿ, ಸಂಘಟನೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. ರಾಜ್ಯ ರಾಜಕಾರಣದಲ್ಲಿ ವಿಧಾನ ಪರಿಷತ್‌ನ ಪ್ರಭಾವಿ ನಾಯಕರಾಗಿದ್ದ ಮಾಜಿ ಸಚಿವ ರಾಮಚಂದ್ರೇಗೌಡ ಅವರು ಸತತ ಐದು ಬಾರಿ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಅಪರೂಪದ ದಾಖಲೆ ನಿರ್ಮಿಸಿದ್ದರು. ತಮ್ಮ ದೀರ್ಘ ರಾಜಕೀಯ ಜೀವನದಲ್ಲಿ ಸಂಘಟನಾ ನಾಯಕನಾಗಿಯೂ, ಆಡಳಿತಗಾರನಾಗಿಯೂ ಗುರುತಿಸಿಕೊಂಡಿದ್ದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ಇಲಾಖೆಯ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದರು.

2010ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದಲ್ಲಿ ಅವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಸುದೀರ್ಘ ಕಾನೂನು ಹೋರಾಟದ ನಂತರ ಕರ್ನಾಟಕ ಹೈಕೋರ್ಟ್ ರಾಮಚಂದ್ರೇಗೌಡ ಅವರಿಗೆ ಸಂಪೂರ್ಣ ಕ್ಲೀನ್ ಚಿಟ್ ನೀಡಿ, ಎಲ್ಲ ಆರೋಪಗಳಿಂದ ದೋಷಮುಕ್ತಗೊಳಿಸಿತ್ತು.

Ads on article

Advertise in articles 1

advertising articles 2

Advertise under the article