-->
ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ  ಭಾರೀ ಮಳೆ:  ರೆಡ್ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ


ಕರಾವಳಿ ಭಾಗದಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2 ಮತ್ತು 3ರಂದು ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾಡಳಿತಗಳು ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ.

ಹವಾಮಾನ ಇಲಾಖೆಯ ಪ್ರಕಾರ, ಮಳೆಯ ಸಂದರ್ಭದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸುವಂತೆ ಸೂಚಿಸಲಾಗಿದೆ.

ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಕಾರಣ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ (ಬೀಚ್) ಇಳಿಯದಂತೆ ನಿರ್ಬಂಧ ಹೇರಲಾಗಿದೆ. ಸುರಕ್ಷತಾ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ಮಲೆನಾಡು ಮತ್ತು ಕರಾವಳಿ ಭಾಗದ ಭೂಕುಸಿತ ಸಂಭವಿಸುವ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಅಥವಾ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದಲ್ಲದೆ, ಮಳೆಯ ಸಂದರ್ಭದಲ್ಲಿ ಮರಗಳು, ಹಳೆಯ ಕಟ್ಟಡಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲುವುದನ್ನು ಕಟ್ಟುನಿಟ್ಟಾಗಿ ತಪ್ಪಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಯಾವುದೇ ರೀತಿಯ ಪ್ರವಾಹ, ಹಾನಿ ಅಥವಾ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದಾಗಿದೆ.

ತುರ್ತು ಸಂಪರ್ಕ ಸಂಖ್ಯೆಗಳು:

ಟೋಲ್ ಫ್ರೀ: 1077

ಉಡುಪಿ ಜಿಲ್ಲಾ ಕಂಟ್ರೋಲ್ ರೂಮ್: 0820-2574802

ಉಡುಪಿ ತಾಲೂಕು ಕಚೇರಿ: 0820-2520417

ಕುಂದಾಪುರ ತಾಲೂಕು: 08254-230357

ಕಾರ್ಕಳ ತಾಲೂಕು: 08258-230201

ಜಿಲ್ಲಾಡಳಿತವು ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನು ಮಾತ್ರ ನಂಬಿ, ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದೆ.

Ads on article

Advertise in articles 1

advertising articles 2

Advertise under the article