ಡಾ.ಶ್ಯಾಮಪ್ರಸಾದ್ ಮುಖರ್ಜಿ ಆದರ್ಶಗಳು ಕಾರ್ಯಕರ್ತರಿಗೆ ಸದಾ ಪ್ರೇರಣೆ: ಕುತ್ಯಾರು ನವೀನ್ ಶೆಟ್ಟಿ
ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ತ್ಯಾಗ, ಶ್ರಮ ಮತ್ತು ಆದರ್ಶಗಳ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಇಂದಿನ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ. ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನಾದರ್ಶಗಳು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸದಾ ಪ್ರೇರಣೆ ಮತ್ತು ಶಕ್ತಿಯ ಮೂಲವಾಗಿವೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಯುವ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ 'ಸ್ಮರಣ ಪಾಕ್ಷಿಕ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ 23ರಿಂದ ಜುಲೈ 6ರವರೆಗೆ ಜಿಲ್ಲೆಯಾದ್ಯಂತ 'ಸ್ಮರಣ ಪಾಕ್ಷಿಕ' ಕಾರ್ಯಕ್ರಮ ನಡೆಯುತ್ತಿದ್ದು, ಜುಲೈ 6ರಂದು ಜಿಲ್ಲೆಯ ಎಲ್ಲಾ ಮಂಡಲ ಕಚೇರಿಗಳು ಹಾಗೂ 1,112 ಬೂತ್‌ಗಳಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಸ್ಮರಣೆ ಹಾಗೂ ವೃಕ್ಷಾರೋಪಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಪಕ್ಷದ ಸಂಘಟನಾ ಕಾರ್ಯಗಳ ಕುರಿತು ಸೂಚನೆ ನೀಡಿದ ಅವರು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಪ್ರತಿಯೊಬ್ಬ ಕಾರ್ಯಕರ್ತರೂ ಸಕ್ರಿಯವಾಗಿ ತೊಡಗಿಸಿಕೊಂಡು ಯಾವುದೇ ಅನರ್ಹ ವ್ಯಕ್ತಿಗಳು ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿದ್ದ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್ ಅವರು, ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನ, ರಾಷ್ಟ್ರಸೇವೆ ಹಾಗೂ ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ಸವಿಸ್ತಾರವಾಗಿ ಉಪನ್ಯಾಸ ನೀಡಿದರು.
ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಹಾಗೂ 'ಸ್ಮರಣ ಪಾಕ್ಷಿಕ' ಜಿಲ್ಲಾ ಸಂಚಾಲಕ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಹಾಗೂ ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಿಜಯ್ ಭಟ್ ಕಡೆಕಾರ್ ವಂದೇ ಮಾತರಂ ಹಾಡಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕೊಡವೂರು ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಂದಿಸಿದರು.

