ಹೆಬ್ರಿಯಲ್ಲಿ ‘ಬೇಡ ಬ್ರೋ’ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಾಗಾರ
Tuesday, July 28, 2026
ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಲೂಕು ಮಟ್ಟದ ಕಾಲೇಜು ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನ ವಿರೋಧ ಮತ್ತು ಜಾಗೃತ ಸಮಿತಿಗಳ ಕಾರ್ಯಾಗಾರ ‘ಬೇಡ ಬ್ರೋ’ ಕಾರ್ಯಕ್ರಮವನ್ನು ಮಂಗಳವಾರ ಹೆಬ್ರಿ ಶ್ರೀ ಅನಂತ ಪದ್ಮನಾಭ ಸಭಾಭವನದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನೀಲ್ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಹೆಬ್ರಿ ತಾಲೂಕು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ರಾಕೇಶ್ ಪ್ರಾನ್ಸಿಸ್ ಬ್ರಿಟ್ಟೋ, ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ಎಸ್., ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸಂತೋಷ್ ಕುಮಾರ್ ಬೈಲೂರು, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಎಸ್.ಆರ್., ಹೆಬ್ರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್ ಎಂ.ವಿ., ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಹಾಗೂ ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಧಾಕರ ಕೆ.ಜಿ. ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಳ್ವಾಸ್, ಮೂಡಬಿದಿರೆಯ ಮನೋವಿಜ್ಞಾನ ಸ್ನಾತಕೋತ್ತರ ಅಧ್ಯಯನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ರವಿಪ್ರಸಾದ್ ಹೆಗ್ಡೆ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳು, ಅದರ ಸಾಮಾಜಿಕ ಹಾಗೂ ಮಾನಸಿಕ ಪರಿಣಾಮಗಳು ಮತ್ತು ವ್ಯಸನದಿಂದ ದೂರವಿರುವ ಅಗತ್ಯದ ಕುರಿತು ಮಾಹಿತಿ ಸಮೃದ್ಧ ಉಪನ್ಯಾಸ ನೀಡಿದರು.
ಇದೇ ವೇಳೆ ಎಸ್.ಆರ್. ಪದವಿಪೂರ್ವ ಕಾಲೇಜು ಹಾಗೂ ಅಮೃತ ಭಾರತಿ ಶಾಲೆಯ ವಿದ್ಯಾರ್ಥಿಗಳು ಮಾದಕ ವ್ಯಸನ ಜಾಗೃತಿ ಕುರಿತ ಕಿರು ಪ್ರಹಸನವನ್ನು ಪ್ರದರ್ಶಿಸಿದರು.
ಕಾರ್ಯಾಗಾರದಲ್ಲಿ ತಾಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿ, ಯುವಜನರಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಸಂಕಲ್ಪ ವ್ಯಕ್ತಪಡಿಸಿದರು.