ಮಣಿಪಾಲ ಶಾಲಾ ಬಸ್ ಅಪಘಾತ: ಗಾಯಾಳು ವಿದ್ಯಾರ್ಥಿಗಳನ್ನು ಭೇಟಿಯಾದ ಕಾಂಗ್ರೆಸ್ ಮುಖಂಡರು
Friday, July 10, 2026
ಮಣಿಪಾಲದ ಕ್ರೈಸ್ಟ್ ಸ್ಕೂಲ್‌ನ ಶಾಲಾ ಬಸ್ ಅಪಘಾತದಲ್ಲಿ ಗಾಯಗೊಂಡು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಕಾಂಗ್ರೆಸ್ ಮುಖಂಡರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಮುಖಂಡರು, ವೈದ್ಯರಿಂದ ಆಕೆಯ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ, ಗಾಯಗೊಂಡ ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರಿಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಬಳಿಕ ಕ್ರೈಸ್ಟ್ ಸ್ಕೂಲ್‌ಗೆ ಭೇಟಿ ನೀಡಿದ ಅವರು, ಮುಖ್ಯೋಪಾಧ್ಯಾಯಿನಿಯೊಂದಿಗೆ ಮಾತುಕತೆ ನಡೆಸಿ ಮಳೆಗಾಲದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಶಾಲಾ ಆಡಳಿತಕ್ಕೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಪಾಧ್ಯಕ್ಷರಾದ ಸುಕೇಶ್ ಕುಂದರ್ ಹಾಗೂ ಶರತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಮತ್ತು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

.jpeg)