-->
ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡನೀಯ- ವೆರೋನಿಕಾ ಕರ್ನೆಲಿಯೋ

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡನೀಯ- ವೆರೋನಿಕಾ ಕರ್ನೆಲಿಯೋ


ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ನಡೆಸಿರುವುದು ದೇಶವೇ ತಲೆತಗ್ಗಿಸುವ ಘಟನೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಆರೋಪಿಸಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಹಾಗೂ ಶಿಕ್ಷಣ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ನಡೆಸಿರುವುದು ಅಮಾನವೀಯ ಕೃತ್ಯವಾಗಿದೆ. ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಬದಲು, ಅವರ ಮೇಲೆ ಪೊಲೀಸ್ ಕ್ರಮ ಕೈಗೊಂಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದ್ದಾರೆ.

ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ಆಗ್ರಹ ದೇಶಾದ್ಯಂತ ವ್ಯಕ್ತವಾಗುತ್ತಿದ್ದರೂ, ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಪೊಲೀಸ್ ಹಾಗೂ ಇತರೆ ಸಾರ್ವಜನಿಕ ಸಂಸ್ಥೆಗಳ ಮೂಲಕ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆಡಳಿತ ವೈಫಲ್ಯವನ್ನು ಮುಚ್ಚಿಹಾಕುವ ಉದ್ದೇಶದಿಂದ ಪ್ರತಿಭಟನಾಕಾರರ ಮೇಲೆ ದಾಳಿ ನಡೆಸುತ್ತಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಬಂಧಿಸಿರುವುದು ಹಾಗೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮತ್ತು ಟಿಯರ್ ಗ್ಯಾಸ್ ಪ್ರಯೋಗಿಸಿರುವುದು ಸರ್ವಾಧಿಕಾರಿ ಧೋರಣೆಯ ಪ್ರತೀಕವಾಗಿದೆ ಎಂದು ವೆರೋನಿಕಾ ಕರ್ನೆಲಿಯೋ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article