ಉಡುಪಿ ನಗರ ಠಾಣೆಗೆ ವಿಚಾರಣೆಗೆ ಹಾಜರಾದ ಶಾಸಕ ಯಶಪಾಲ್ ಸುವರ್ಣ
Thursday, July 30, 2026
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬಳಿಕ ಬುಧವಾರ ಉಡುಪಿ ನಗರ ಪೊಲೀಸರು ಶಾಸಕರ ನಿವಾಸಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು. ಅದರಂತೆ ಗುರುವಾರ ರಾತ್ರಿ ಸುಮಾರು 8.25ಕ್ಕೆ ಯಶ್ ಪಾಲ್ ಸುವರ್ಣ ಅವರು ನಗರ ಪೊಲೀಸ್ ಠಾಣೆಗೆ ಆಗಮಿಸಿದರು. ಪೊಲೀಸರು ಸುಮಾರು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.