-->
 NEET ಪ್ರಶ್ನೆ ಪತ್ರಿಕೆ ಸೋರಿಕೆ: ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರ- ಕಾಂಗ್ರೆಸ್ ಕಿಡಿ

NEET ಪ್ರಶ್ನೆ ಪತ್ರಿಕೆ ಸೋರಿಕೆ: ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರ- ಕಾಂಗ್ರೆಸ್ ಕಿಡಿ


ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಒಳಗಾಗಿದ್ದು, ಹಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳು ಮತ್ತು ಯುವಕರು ನಡೆಸುತ್ತಿರುವ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಪ್ರತಿಭಟನಾಕಾರರ ಬೇಡಿಕೆಗಳ ಕುರಿತು ಚರ್ಚೆ ನಡೆಸುವ ಕನಿಷ್ಠ ಸೌಜನ್ಯವನ್ನೂ ಸರ್ಕಾರ ತೋರಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಆಗ್ರಹಿಸಿ ಶಿಕ್ಷಣತಜ್ಞ ಹಾಗೂ ಪರಿಸರವಾದಿ ಸೋನಂ ವಾಂಗಚುಕ್ ಅವರು ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಬಗ್ಗೆಯೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಭಾಸ್ಕರ ರಾವ್ ಕಿದಿಯೂರು ಟೀಕಿಸಿದರು. ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಉಪವಾಸ ಸತ್ಯಾಗ್ರಹ ಕೈಬಿಟ್ಟು ಹೋರಾಟ ಮುಂದುವರಿಸುವಂತೆ ಮನವೊಲಿಸುವ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು.

"ಪ್ರತಿಭಟನಾಕಾರರೊಂದಿಗೆ ಚರ್ಚೆ ಮತ್ತು ಸಂವಾದ ನಡೆಸುವುದು ದೌರ್ಬಲ್ಯವೆಂದು ಮೋದಿ ಸರ್ಕಾರ ಭಾವಿಸಿದಂತಿದೆ. ಯಾವುದೇ ವಿಚಾರದಲ್ಲೂ ಸಂವಾದ ನಡೆಸದೆ, ಹೋರಾಟಗಾರರ ಮೇಲೆ ಆರೋಪ ಹೊರಿಸಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ" ಎಂದು ಅವರು ಆರೋಪಿಸಿದರು.

ರೈತರ ಪ್ರತಿಭಟನೆ, ಮಹಿಳಾ ಕುಸ್ತಿ ಪಟುಗಳ ಹೋರಾಟ, ಮಣಿಪುರದ ಹಿಂಸಾಚಾರ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರ ಮೌನ ವಹಿಸಿದೆ ಎಂದು ಅವರು ದೂರಿದರು. ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಮಾನವೀಯತೆಯ ಬಗ್ಗೆ ಗೌರವ ಹೊಂದಿರುವ ಸರ್ಕಾರ ಇಂತಹ ರೀತಿಯಲ್ಲಿ ನಡೆದುಕೊಳ್ಳಲು ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ಕೇಂದ್ರ ಸರ್ಕಾರದ ಮೌನವು ಸಂವೇದನಾರಹಿತ ಆಡಳಿತದ ಉದಾಹರಣೆಯಾಗಿದೆ ಎಂದು ಭಾಸ್ಕರ ರಾವ್ ಕಿದಿಯೂರು ಹೇಳಿದರು.

Ads on article

Advertise in articles 1

advertising articles 2

Advertise under the article