-->
 ದೆಹಲಿ ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ

ದೆಹಲಿ ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ


ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್‌ ಕಡೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ನೀಡಿದ್ದು, ಜನರ ಧ್ವನಿಯನ್ನು ಆಲಿಸುವ ಬದಲು ಬಲಪ್ರಯೋಗದ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ, ಅವರೊಂದಿಗೆ ಸಂವಾದ ನಡೆಸುವ ಬದಲು ಲಾಠಿಚಾರ್ಜ್ ನಡೆಸಿರುವುದು ಕೇಂದ್ರ ಸರ್ಕಾರದ ಅಸಹಿಷ್ಣು ಮನೋಭಾವವನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಪ್ರತಿಭಟನಾಕಾರರಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ದೊರಕಬೇಕು. ಅಲ್ಲದೆ, ಈ ಘಟನೆ ಕುರಿತು ಸ್ವತಂತ್ರ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಿ, ಅನಗತ್ಯ ಬಲಪ್ರಯೋಗಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜನರ ಧ್ವನಿಯನ್ನು ದಮನಿಸುವ ಮೂಲಕ ಯಾವುದೇ ಸರ್ಕಾರವೂ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯವಿಲ್ಲ. ಭಿನ್ನಾಭಿಪ್ರಾಯಗಳನ್ನು ಗೌರವಿಸಿ, ಸಂವಾದದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ಪ್ರಜಾಪ್ರಭುತ್ವದ ನಿಜವಾದ ಮಾರ್ಗ ಎಂದು ಮೊಳಹಳ್ಳಿ ದಿನೇಶ್ ಹೆಗ್ಡೆ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article