ನೀಟ್ ಅಕ್ರಮಕ್ಕೆ ಹೊಣೆ ಹೊತ್ತು ಪ್ರಧಾನಿ, ಸಚಿವರು ಸ್ಥಾನ ತ್ಯಜಿಸಲಿ: ಮಂಜುನಾಥ್ ಭಂಡಾರಿ
Thursday, July 23, 2026
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸದೆ, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆರೋಪಿಸಿದರು.
ಉಡುಪಿಯ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ದೇಶದ ಪ್ರಧಾನಿ ಹಾಗೂ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಕಿವಿಗೊಡುತ್ತಿಲ್ಲ. ನೂರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಗಂಭೀರ ವಿಷಯದ ಬಗ್ಗೆ ಚರ್ಚೆ ನಡೆಸಲು ಸಹ ಸರ್ಕಾರ ಮುಂದಾಗುತ್ತಿಲ್ಲ ಎಂದು ಟೀಕಿಸಿದರು. ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ನಡೆಸಿದ ಪ್ರತಿಭಟನೆಗೂ ಸರ್ಕಾರ ಸ್ಪಂದಿಸಿಲ್ಲ. ಸಂಸತ್ ಕಡೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಲಾಗಿದೆ. ವಿದ್ಯಾರ್ಥಿಗಳನ್ನು ರಾಷ್ಟ್ರವಿರೋಧಿಗಳಂತೆ ಬಿಂಬಿಸುವ ಪ್ರಯತ್ನ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಆಡಳಿತವಿದ್ದ ಸಂದರ್ಭ ಕಾಂಗ್ರೆಸ್ ವಿರುದ್ಧ ವಿದ್ಯಾರ್ಥಿ ಸಮುದಾಯವನ್ನು ಬಳಸಿಕೊಳ್ಳಲು ಯತ್ನಿಸಿದ್ದೇ ಈಗ ಬಿಜೆಪಿಗೆ ತಿರುಗುಬಾಣವಾಗಿದೆ ಎಂದು ಹೇಳಿದರು.
ಕಳೆದ 12 ವರ್ಷಗಳಲ್ಲಿ ಹಲವು ನೇಮಕಾತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಈ ಪ್ರಕರಣಗಳಲ್ಲಿ ಎಷ್ಟು ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಈ ಬೆಳವಣಿಗೆಗಳಿಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಮುಷ್ಕರಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ ಘಟನೆಗೆ ನೈತಿಕ ಹೊಣೆ ಹೊತ್ತು ಗೃಹ ಸಚಿವರೂ ರಾಜೀನಾಮೆ ನೀಡಬೇಕು. ಅಲ್ಲದೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಂಜುನಾಥ್ ಭಂಡಾರಿ ಒತ್ತಾಯಿಸಿದರು.
