ಬಿಸಿರೋಡ್ ಲಾವಣ್ಯ ಹತ್ಯೆ ಪ್ರಕರಣ: ಸುಳ್ಳು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲು
ಬಿಸಿ ರೋಡ್‌ನಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹರಿಬಿಟ್ಟ ಆರೋಪದ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ವಾಟ್ಸಾಪ್ ಗ್ರೂಪ್‌ಗಳು ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ದೂರು ದಾಖಲಾಗಿದ್ದು, ಆರೋಪಿತರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 78, 126, 103 ಹಾಗೂ ಆರ್ಮ್ಸ್ ಆ್ಯಕ್ಟ್‌ನಡಿ ಪ್ರಕರಣ ದಾಖಲಿಸಲಾಗಿದೆ.
ಕೊಲೆ ಆರೋಪಿಯ ಭಾವಚಿತ್ರವನ್ನು ಎಡಿಟ್ ಮಾಡಿ, ಕೇಸರಿ ಶಾಲು ಹಾಕಿ, ಹಣೆಗೆ ತಿಲಕ ಇಟ್ಟು ಆತನನ್ನು ಬಜರಂಗದಳ ಕಾರ್ಯಕರ್ತನೆಂದು ಬಿಂಬಿಸುವ ರೀತಿಯಲ್ಲಿ ಸುಳ್ಳು ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇಂತಹ ಪೋಸ್ಟ್‌ಗಳು ಸಮಾಜದಲ್ಲಿ ಗೊಂದಲ ಹಾಗೂ ಶಾಂತಿ ಭಂಗ ಉಂಟುಮಾಡುವ ಉದ್ದೇಶದಿಂದ ಪ್ರಕಟಿಸಲಾಗಿದೆ ಎಂದು ಆರೋಪಿಸಲಾಗಿದೆ.
ಟ್ರೋಲ್ ಮಾಸ್ಟರ್, ಯುವ ಬೆಳ್ತಂಗಡಿ ಹಾಗೂ ಫ್ಯಾಕ್ಟ್ ಅಂಡ್ ಜಸ್ಟೀಸ್ ಸೇರಿದಂತೆ ಕೆಲವು ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇಂತಹ ತಪ್ಪು ಮಾಹಿತಿಯ ಪೋಸ್ಟ್‌ಗಳು ಪ್ರಕಟವಾಗಿದ್ದವು ಎಂದು ತಿಳಿದುಬಂದಿದೆ.
ಲಾವಣ್ಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ, ಇದು ಏಕಪಕ್ಷೀಯ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ಘಟನೆ ಎನ್ನುವುದು ಬೆಳಕಿಗೆ ಬಂದಿದೆ. ಲಾವಣ್ಯ ಅವರು ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆರೋಪಿ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಘಟನೆಯ ಕುರಿತು ತಪ್ಪು ಮಾಹಿತಿ ಹರಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರಕರಣಗಳ ತನಿಖೆ ಮುಂದುವರಿದಿದೆ.