ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ
Monday, August 10, 2026
ಕಾಂಗ್ರೆಸ್ ಮುಖಂಡ ಹಾಗೂ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಉತ್ತರಾಖಂಡ ಮೂಲದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರ ಮೂಲದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ಅವರ ನೇತೃತ್ವದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಬೇಕಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಪೊಲೀಸರ ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶ ಪುರುಷೋತ್ತಮ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.
ಪೊಲೀಸ್ ಕಸ್ಟಡಿ ಅವಧಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಲು ತನಿಖಾ ತಂಡ ಮುಂದಾಗಿದೆ.