ಕರಾವಳಿಯಲ್ಲಿ ಹೈಕೋರ್ಟ್ ಪೀಠಕ್ಕಾಗಿ ಆ.22ರಂದು ಸಂಘಟಿತ ಹೋರಾಟಕ್ಕೆ ಚಾಲನೆ
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸಬೇಕೆಂಬ ಬಹುಕಾಲದ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಆಗಸ್ಟ್ 22ರಂದು ಉಡುಪಿಯಲ್ಲಿ ಮಹತ್ವದ ಸಭೆ ನಡೆಯಲಿದೆ.
‘ಯು-ಆ್ಯಕ್ಟ್’ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ವತಿಯಿಂದ ಆಗಸ್ಟ್ 22ರಂದು ಮಧ್ಯಾಹ್ನ 3 ಗಂಟೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸ್ಥಾಪಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು.
ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯತೆ ಕುರಿತು ಸಭೆಯಲ್ಲಿ ಚರ್ಚಿಸಿ, ಸರ್ಕಾರದ ಮುಂದೆ ಸಂಘಟಿತವಾಗಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ವಕೀಲರ ಸಂಘಗಳು, ಪತ್ರಕರ್ತರ ಸಂಘ, ಸಾಮಾಜಿಕ ಸಂಸ್ಥೆಗಳು, ಉದ್ಯಮಿಗಳ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಮಾಜಿ ಸೈನಿಕರ ಸಂಘಗಳು, ಆಟೋ ಚಾಲಕರು ಹಾಗೂ ವಿವಿಧ ನೌಕರರ ಯೂನಿಯನ್‌ಗಳು ಸೇರಿದಂತೆ ಸಮಾಜದ ಎಲ್ಲ ವರ್ಗಗಳನ್ನು ಪ್ರತಿನಿಧಿಸುವ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಕರಾವಳಿ ಭಾಗದಿಂದ ಬೆಂಗಳೂರಿನ ಹೈಕೋರ್ಟ್‌ನಲ್ಲಿ ಪ್ರಕರಣಗಳನ್ನು ನಡೆಸಲು ಸಾರ್ವಜನಿಕರು ಹಲವು ಸಂದರ್ಭಗಳಲ್ಲಿ 900ರಿಂದ 1,000 ಕಿಲೋಮೀಟರ್‌ಗೂ ಅಧಿಕ ದೂರ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಅದರಲ್ಲೂ ಮಳೆಗಾಲದಲ್ಲಿ ಘಾಟಿ ರಸ್ತೆಗಳ ಸಂಚಾರ ಕಷ್ಟಕರವಾಗುವುದರಿಂದ ಕಕ್ಷಿದಾರರು, ಮಹಿಳೆಯರು ಹಾಗೂ ಸಾರ್ವಜನಿಕರು ಸಾಕಷ್ಟು ಸಮಯ ಮತ್ತು ಹಣ ವ್ಯಯಿಸಬೇಕಾಗಿದೆ ಎಂದು ಅವರು ಹೇಳಿದರು.
ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಜನರಿಗೆ ಶೀಘ್ರ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವಂತಾಗಲಿದೆ. ಪರಿಸರ, ಭೂ ವ್ಯಾಜ್ಯ, ಸಿಆರ್‌ಝಡ್, ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಕಾನೂನು ಪರಿಹಾರ ದೊರೆಯಲು ಸಹಕಾರಿಯಾಗಲಿದೆ. ಇದರಿಂದ ಆಡಳಿತ ವ್ಯವಸ್ಥೆ ಚುರುಕುಗೊಳ್ಳುವುದರ ಜೊತೆಗೆ ಕರಾವಳಿ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೂ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಹೋರಾಟ ಕೇವಲ ವಕೀಲರ ಸಮುದಾಯಕ್ಕೆ ಸೀಮಿತವಾಗದೆ, ಇಡೀ ಕರಾವಳಿ ಜನತೆಯ ಧ್ವನಿಯಾಗಬೇಕು. ಈ ಹಿನ್ನೆಲೆಯಲ್ಲಿ ವಿವಿಧ ವಕೀಲರ ಸಂಘಗಳು ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆಗಳನ್ನು ಒಗ್ಗೂಡಿಸಿ ಹೋರಾಟವನ್ನು ಸಂಘಟಿಸಲಾಗುವುದು ಎಂದು ಪ್ರೇಮ್ ಪ್ರಸಾದ್ ಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಪೌರ್ಣಾಮಿ ಪ್ರೇಮ್, ವಿಜಯ್ ಡಿಸೋಜಾ, ಮಾಧವ ಕಾಮತ್, ಸರಿತಾ ಹಾಗೂ ಸುರೇಶ್ ಕಾಮತ್ ಉಪಸ್ಥಿತರಿದ್ದರು.