ಬಜರಂಗದಳ ಮುಖಂಡ ಪುನೀತ್ ಅತ್ತಾವರ್‌ಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ
Thursday, August 13, 2026
ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)–2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದೆ. ಆಗಸ್ಟ್ 14ರಿಂದ ನವೆಂಬರ್ 13ರವರೆಗೆ ಮೂರು ತಿಂಗಳ ಕಾಲ ಪುನೀತ್ ಅತ್ತಾವರ್ ಅವರು ಉಡುಪಿ ಜಿಲ್ಲೆಯನ್ನು ಪ್ರವೇಶಿಸದಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುವ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆ ಪ್ರವೇಶ ನಿರ್ಬಂಧಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ಉಡುಪಿ ಪೊಲೀಸರು ಪುನೀತ್ ಅತ್ತಾವರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.