-->
ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ‘ಉಡುಪಿ ಸಿವಿಕ್ ವಾಚ್’ ಆಪ್: ಜಿಲ್ಲಾದ್ಯಂತ ಶೀಘ್ರ ಅನುಷ್ಠಾನ– ಸಚಿವ ರಿಜ್ವಾನ್ ಅರ್ಷದ್

ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ‘ಉಡುಪಿ ಸಿವಿಕ್ ವಾಚ್’ ಆಪ್: ಜಿಲ್ಲಾದ್ಯಂತ ಶೀಘ್ರ ಅನುಷ್ಠಾನ– ಸಚಿವ ರಿಜ್ವಾನ್ ಅರ್ಷದ್


ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಅಭಿವೃದ್ಧಿಪಡಿಸಿರುವ ‘ಉಡುಪಿ ಸಿವಿಕ್ ವಾಚ್’ ಆಪ್ ಅನ್ನು ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ವ್ಯವಸ್ಥೆಯನ್ನು ಉಡುಪಿ ಜಿಲ್ಲೆಯಾದ್ಯಂತ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಹೇಳಿದರು.


ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.


ದೇವಾಲಯಗಳಲ್ಲಿ ಪ್ರತಿನಿತ್ಯ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಿ, ಅವುಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಅಗರಬತ್ತಿ, ಬಿದಿರು ರಹಿತ ಧೂಪದಕಡ್ಡಿ ಸೇರಿದಂತೆ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಯೋಜನೆಯನ್ನು ಜಿಲ್ಲಾಡಳಿತವು ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ಕೈಗೆತ್ತಿಕೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಕಾಲ್ಪನಿಕ ಮಾಸ್ಕಾಟ್ ‘ಉಪಿಲಿ’ಯನ್ನು ಸಚಿವರು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ‘ಉಡುಪಿ ಸುಗಂಧ’ವನ್ನೂ ಬಿಡುಗಡೆ ಮಾಡಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಯಶಪಾಲ್ ಸುವರ್ಣ ವಹಿಸಿದ್ದರು. ಮಂಜುನಾಥ ಭಂಡಾರಿ, ಎಂ.ಎ. ಗಫೂರ್, ಅಶೋಕ್ ಕುಮಾರ್ ಕೊಡವೂರು, ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಸಚಿವ ರಿಜ್ವಾನ್ ಅರ್ಷದ್ ಅವರು ಆಕರ್ಷಕ ಪಥಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿದರು. ಬಳಿಕ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿದರು. ಕೊನೆಯಲ್ಲಿ ಉಡುಪಿ ಹಾಗೂ ಸುತ್ತಮುತ್ತಲಿನ ಶಾಲೆಗಳ ವಿದ್ಯಾರ್ಥಿಗಳು ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

 

Ads on article

Advertise in articles 1

advertising articles 2

Advertise under the article