ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: ವ್ಯಕ್ತಿ ಬಂಧನ
16 ವರ್ಷದ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಕುರಿತು ದಾಖಲಾದ ದೂರಿನ ಮೇರೆಗೆ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 16 ವರ್ಷದ ಬಾಲಕಿಯನ್ನು ಕೆಲ ದಿನಗಳಿಂದ ಮಧ್ಯವಯಸ್ಕ ಅಪರಿಚಿತ ವ್ಯಕ್ತಿಯೊಬ್ಬರು ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ.
ಆಗಸ್ಟ್ 19ರಂದು ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗ, ಅದೇ ವ್ಯಕ್ತಿ ಅಲ್ಲಿಯೂ ಬಾಲಕಿಯನ್ನು ಗಮನಿಸುತ್ತಿರುವುದು ಕಂಡುಬಂದಿದೆ. ಇದರಿಂದ ಭಯಗೊಂಡ ಬಾಲಕಿ, ತನ್ನ ತಾಯಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಘಟನೆ ಕುರಿತು ಮಾಹಿತಿ ನೀಡಿದ್ದಾಳೆ.
ಬಳಿಕ ಬಾಲಕಿಯ ತಾಯಿ ಹಾಗೂ ಕಚೇರಿ ಮಾಲೀಕರು ಬಸ್ ನಿಲ್ದಾಣಕ್ಕೆ ತೆರಳಿದಾಗ ಆರೋಪಿತ ವ್ಯಕ್ತಿ ಅಲ್ಲಿಯೇ ಇದ್ದನು. ಆತನನ್ನು ವಿಚಾರಿಸಿದಾಗ ತನ್ನ ಹೆಸರು ಜಯಂತ್ ಎಂದು ತಿಳಿಸಿ ಅಲ್ಲಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಯಿತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.