-->
ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್ ದಾಳಿ: ಎಫ್‌ಐಆರ್‌ಗೆ ಆಗ್ರಹಿಸಿ ರಾಹುಲ್ ಗಾಂಧಿ ಧರಣಿ

ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್ ದಾಳಿ: ಎಫ್‌ಐಆರ್‌ಗೆ ಆಗ್ರಹಿಸಿ ರಾಹುಲ್ ಗಾಂಧಿ ಧರಣಿ


ಜುಲೈ 20 ರಂದು ನಡೆದ ನೀಟ್ ಅಕ್ರಮದ ವಿರುದ್ಧ Gen Z ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಪೊಲೀಸರು ಪೆಲೆಟ್ ಗನ್ ಬಳಸಿ ಬಲಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿ, ಈ ಬಗ್ಗೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ದೆಹಲಿಯ ಸಂಸತ್‌ ರಸ್ತೆ ಪೊಲೀಸ್‌ ಠಾಣೆ ಎದುರು ಧರಣಿ ನಡೆಸಿದರು.

ಜುಲೈ 20ರಂದು ಜಂತರ್‌ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಾಹಿಲ್‌ ಲೋಚಬ್‌ ಮೇಲೆ ಪೊಲೀಸರು ಪೆಲೆಟ್‌ ಗನ್‌ನಿಂದ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಯ ಕಣ್ಣಿಗೆ ಗಂಭೀರ ಗಾಯವಾಗಿದ್ದು, ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಆತಂಕ ಎದುರಾಗಿದೆ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿ ಸಾಹಿಲ್‌ ಲೋಚಬ್‌ ಹಾಗೂ ಆತನ ತಾಯಿಯೊಂದಿಗೆ ಪೊಲೀಸ್‌ ಠಾಣೆಗೆ ತೆರಳಿದ ರಾಹುಲ್‌ ಗಾಂಧಿ, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರನ್ನು ಒತ್ತಾಯಿಸಿದರು. ಆದರೆ ಪೊಲೀಸರು ಎಫ್‌ಐಆರ್‌ ದಾಖಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು ಠಾಣೆಯ ಹೊರಭಾಗದಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿದರು.

ಬಳಿಕ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಕೂಡ ಸ್ಥಳಕ್ಕೆ ಆಗಮಿಸಿ ಧರಣಿಯಲ್ಲಿ ಭಾಗಿಯಾದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಈಗಾಗಲೇ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ದೆಹಲಿ ಪೊಲೀಸರು ರಾಹುಲ್‌ ಗಾಂಧಿ ಅವರಿಗೆ ತಿಳಿಸಿದರು. ಆದರೆ ಪೊಲೀಸರ ಸಮಜಾಯಿಷಿಗೆ ಒಪ್ಪದ ರಾಹುಲ್‌ ಗಾಂಧಿ, ಎಫ್‌ಐಆರ್‌ ದಾಖಲಿಸುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಧರಣಿ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್‌ ಗಾಂಧಿ, “ಜುಲೈ 20ರಂದು ಜಂತರ್‌ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಹಿಲ್‌ ಮೇಲೆ ಪೊಲೀಸರು ಪೆಲೆಟ್‌ ಗನ್‌ನಿಂದ ದಾಳಿ ನಡೆಸಿದ್ದಾರೆ. ಇದರಿಂದಾಗಿ ಆತನ ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಭೀತಿ ಎದುರಾಗಿದೆ” ಎಂದು ಆರೋಪಿಸಿದರು.

ಸಂತ್ರಸ್ತ ವಿದ್ಯಾರ್ಥಿಗೆ ನ್ಯಾಯ ದೊರಕಿಸುವುದು ಹಾಗೂ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವುದು ತಮ್ಮ ಮುಖ್ಯ ಬೇಡಿಕೆಯಾಗಿದೆ ಎಂದು ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article