ಕರಾವಳಿಯಲ್ಲಿ ಭಾರೀ ಮಳೆ: ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚನೆ
Wednesday, August 19, 2026
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುತ್ತಿದೆ. ಮುಂದಿನ ಕೆಲ ದಿನಗಳ ಕಾಲ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ. ಹೀಗಾಗಿ ಸಮುದ್ರಕ್ಕೆ ಇಳಿಯುವ ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕರಾವಳಿ ನಿವಾಸಿಗಳು ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.
ಮುಂದಿನ ದಿನಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿಗಳು, ಹಳ್ಳಗಳು ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.