ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ಬಿಜೆಪಿಯಿಂದ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮಹರ್ಷಿ ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ಪಾತ್ರದ ಕುರಿತು ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ನೈತಿಕ ಹೊಣೆ ಹೊತ್ತು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು. ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ ಹಾಗೂ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಉಪಾಧ್ಯಕ್ಷ ಪ್ರಥ್ವಿರಾಜ್ ಮಣಿಪಾಲ್, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್, ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಸದಾನಂದ ಪ್ರಭು ಸೇರಿದಂತೆ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.