ಕರ್ನಾಟಕದಲ್ಲಿ 1 ವರ್ಷ ಗುಟ್ಕಾ–ಪಾನ್ ಮಸಾಲಾ ನಿಷೇಧ
ಕರ್ನಾಟಕ ಸರ್ಕಾರವು ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಹಾಗೂ ಮಾರಾಟಕ್ಕೆ ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣ ನಿಷೇಧ ಹೇರಿದೆ.
ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ–2006ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿ–2011ರ ನಿಯಮ 2.3.4ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ನಿಷೇಧ ಜಾರಿಗೆ ಬಂದಿದ್ದು, ರಾಜ್ಯದಾದ್ಯಂತ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲಾಗಳ ಯಾವುದೇ ರೀತಿಯ ಮಾರಾಟವನ್ನು ನಿಷೇಧಿಸಲಾಗಿದೆ.
ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕ ಪ್ಯಾಕೆಟ್‌ಗಳಲ್ಲಿ ನೀಡಿ, ಗ್ರಾಹಕರು ನಂತರ ಅವುಗಳನ್ನು ಸುಲಭವಾಗಿ ಮಿಶ್ರಣ ಮಾಡಿಕೊಂಡು ಸೇವಿಸುವ ರೀತಿಯಲ್ಲಿ ಮಾರಾಟ ಮಾಡುವ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ಪ್ಯಾಕೆಟ್, ಸ್ಯಾಚೆಟ್ ಅಥವಾ ಯಾವುದೇ ಇತರೆ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟ ನಡೆಸುವುದು ನಿಷೇಧಿತವಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ಈ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.