-->
 ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ


ಕಾಪು ತಾಲೂಕು ಮುದರಂಗಡಿಯ ಸೇಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬೈಂದೂರಿನ ಯಡ್ತರೆ ನಿವಾಸಿ ಲೋಕೇಶ್ ತೇಜ ಕೊಠಾರಿ (42) ಬಂಧಿತ ಆರೋಪಿ. ಆಗಸ್ಟ್ 21ರಂದು ವಿಶೇಷ ಕರ್ತವ್ಯದಲ್ಲಿದ್ದ ಕಾರ್ಕಳ–ಪಡುಬಿದ್ರೆ ಪೊಲೀಸರು ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣದ ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.  

ಪೊಲೀಸರ ಪ್ರಕಾರ, ಲೋಕೇಶ್ ತೇಜ ಕೊಠಾರಿ ಈ ಹಿಂದೆ ಬಾಂಬೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಮತ್ತೋರ್ವ ಆರೋಪಿ ಕಿಶೋರ್ ರಾಮ ಪೂಜಾರಿ ಅವರ ಪರಿಚಯವಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ರಾಜು ಅವರಿಗೆ ಮೋಟಾರ್ ಸೈಕಲ್‌ಗಳನ್ನು ಒದಗಿಸುವ ಮೂಲಕ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಆತನಿಂದ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಹಾಗೂ ಮೋಟಾರ್ ಸೈಕಲ್‌ನ ಎಂಜಿನ್ ನಂಬರ್ ಮತ್ತು ಚಾಸಿಸ್ ನಂಬರ್‌ಗಳನ್ನು ಉಜ್ಜಲು ಬಳಸಿದ ಮಿಷಿನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಈ ಪ್ರಕರಣದಲ್ಲಿ ಈಗಾಗಲೇ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ಮೋಲ್ ರಸ್ತೋಗಿ ಮತ್ತು ಜಿಯಾಹುಲ್ ವಾಜುಲ್ ಶೇಖ್ @ ದೀಪಕ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅದೇ ರೀತಿ, ಕೊಲೆ ಕೃತ್ಯಕ್ಕೆ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಮತ್ತು ಕಿಶೋರ್ ರಾಮ ಪೂಜಾರಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಪ್ರಕರಣದ ಮೊದಲ ಆರೋಪಿ ರಾಜು ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣವಿದ್ದು, ಆ ಪ್ರಕರಣದಲ್ಲಿ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article