ಮಾಜಿ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ನಿಧನ
ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ದೀರ್ಘಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಿ.ಸಿ. ನಾಗೇಶ್ ಅವರು ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿ ಅವರ ಆರೋಗ್ಯ ಸ್ಥಿತಿ ಏಕಾಏಕಿ ಕ್ಷೀಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಬಿ.ಸಿ. ನಾಗೇಶ್ ಅವರು ಬಿಜೆಪಿಯ ಹಿರಿಯ ನಾಯಕರಾಗಿ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ತಿಪಟೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು ರಾಜ್ಯದ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಹಲವು ಮಹತ್ವದ ನಿರ್ಧಾರಗಳ ಮೂಲಕ ಗಮನ ಸೆಳೆದಿದ್ದರು.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಬಿ.ಸಿ. ನಾಗೇಶ್ ಅವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ನಾಯಕರು ಕಂಬನಿ ಮಿಡಿದಿದ್ದಾರೆ.
ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಕುಟುಂಬಸ್ಥರು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹಾಗೂ ರಾಜಕೀಯ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.