ನೀಟ್ ಅಕ್ರಮ ವಿರುದ್ಧ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗ: ರಾಹುಲ್ ಗಾಂಧಿ ಆಕ್ಷೇಪ
ನೀಟ್ ಅಕ್ರಮಗಳ ವಿರುದ್ಧ ಜುಲೈ 20ರಂದು ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ದೂರು ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾಹಿಲ್ ಲೋಚಬ್ ಕೂಡ ರಾಹುಲ್ ಗಾಂಧಿ ಅವರೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದರು ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಬಲಪ್ರಯೋಗ ಹಾಗೂ ಪೆಲೆಟ್ ಗನ್ ಬಳಕೆಯ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿ ಎಫ್‌ಐಆರ್ ದಾಖಲಿಸಬೇಕು ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಅವರು ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ತೆರಳಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ, ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಬಳಿಕ ರಾಹುಲ್ ಗಾಂಧಿ ಕೇಂದ್ರ ವಿಭಾಗದ ಡಿಸಿಪಿಯನ್ನು ಭೇಟಿಯಾಗಿದ್ದರು.
ನಂತರ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿದ ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ತಮ್ಮ ದೂರು ಅಧಿಕೃತವಾಗಿ ಸ್ವೀಕರಿಸಿ ಪ್ರಕರಣ ದಾಖಲಿಸುವವರೆಗೆ ಪೊಲೀಸ್ ಠಾಣೆಯಲ್ಲೇ ಉಳಿದು ಒತ್ತಾಯ ಮುಂದುವರಿಸುವುದಾಗಿ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೀಟ್ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಇದೀಗ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ಕುರಿತು ಪೊಲೀಸರ ಮುಂದಿನ ಕ್ರಮದತ್ತ ಗಮನ ಹರಿಸಲಾಗಿದೆ.